ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ | ವರಿಷ್ಠರು ಆದಷ್ಟು ಬೇಗ ಗೊಂದಲ ಬಗೆಹರಿಸಬೇಕು: ಡಿ.ವಿ.ಸದಾನಂದ ಗೌಡ
"ನಮ್ಮಲ್ಲಿ ಆಂತರಿಕ ಭಿನ್ನಾಭಿಪ್ರಾಯವಿರುವುದು ಸತ್ಯ"

ಬೆಂಗಳೂರು : ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುತ್ತಾರೋ ಅಥವಾ ಹಾಲಿ ಅಧ್ಯಕ್ಷರನ್ನೆ ಮುಂದುವರೆಸುತ್ತಾರೋ ಎಂಬ ಗೊಂದಲವನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಆದಷ್ಟು ಬೇಗ ಬಗೆಹರಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಆಗ್ರಹಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾದ ಸಮಯಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಅಗತ್ಯವಿದೆ. ನೂತನ ಅಧ್ಯಕ್ಷರ ನೇಮಕದಲ್ಲಿ ವಿಳಂಬ ಆದಷ್ಟು ಕಾರ್ಯಕರ್ತರಲ್ಲಿ ಗೊಂದಲ ಮುಂದುವರೆಯುತ್ತಲೆ ಇರುತ್ತದೆ. ಆದುದರಿಂದ, ಕಲ್ಲು ಬಂಡೆಯನ್ನಾದರೂ ಅಧ್ಯಕ್ಷರನ್ನಾಗಿ ಮಾಡಲಿ, ಆದರೆ ಬೇಗ ಮಾಡಲಿ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವಿಪಕ್ಷವಾಗಿ ಕೆಲಸ ಮಾಡುತ್ತಿವೆ. ಆದುದರಿಂದ, ಎರಡು ಪಕ್ಷಗಳ ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿ ರಚನೆ ಮಾಡಬೇಕು. ಪ್ರತಿ ತಿಂಗಳು ಈ ಸಮನ್ವಯ ಸಮಿತಿ ಸಭೆ ಸೇರಿ ಸರಕಾರದ ವಿರುದ್ಧದ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಬೇಕು. ಅಲ್ಲದೇ, ಪಕ್ಷದ ಕೋರ್ ಕಮಿಟಿ ಸಭೆಯನ್ನು ಕರೆದು ಕೆಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದು ಅವರು ಸಲಹೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುನಃ ಸಕ್ರಿಯ ರಾಜಕಾರಣದತ್ತ ಮುಖ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸದಾನಂದ ಗೌಡ, ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರು ಪಕ್ಷದ ಕಚೇರಿ ಬರುತ್ತಿರುವುದು ಒಳ್ಳೆಯ ಬೆಳವಣಿಗೆ. ಕೆಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವರ ಮಾರ್ಗದರ್ಶನ ಅಗತ್ಯ ಎಂದು ಹೇಳಿದರು.
ಯಡಿಯೂರಪ್ಪ ಹಿಂದಿನಿಂದಲೂ ಸಕ್ರಿಯರಾಗಿದ್ದರು. ಆದರೆ, ದೊಡ್ಡ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರಲಿಲ್ಲ. ಆದರೆ, ಈಗ ಏಕೆ ಬಂದರೂ ಎಂಬುದಕ್ಕೆ ಕಾರಣ ನನಗೆ ಗೊತ್ತಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.
ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸದಿಲ್ಲಿಗೆ ಹೋಗಿರುವ ವಿಚಾರ ನನಗೆ ಗೊತ್ತಿಲ್ಲ. ನಮ್ಮಲ್ಲಿ ಆಂತರಿಕ ಭಿನ್ನಾಭಿಪ್ರಾಯವಿರುವುದು ಸತ್ಯ. ಕೋರ್ ಕಮಿಟಿಯಲ್ಲಿಯೂ ವಿಷಯಾಧಾರಿತ ಚರ್ಚೆಗಳು ನಡೆಯುತ್ತಿಲ್ಲ ಎಂದ ಅವರು, ವಿಜಯೇಂದ್ರ ಬದಲಾವಣೆ ಮಾಡುವಂತೆ ಭಿನ್ನಮತಿಯರು ತನ್ನ ಬಳಿ ಪ್ರಸ್ತಾವಿಸಿದ್ದು ನಿಜ ಎಂದು ಹೇಳಿದರು.







