ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
ಮಂಗಳವಾರ ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ರೇಷ್ಮೆ ಕೃಷಿ ಯೋಜನೆಯಡಿ ನೀಡಲಾಗುತ್ತಿರುವ ಸಹಾಯಧನ, ಸಾಲ ಸೌಲಭ್ಯದ ಕುರಿತು, ರೇಷ್ಮೆ ಕೃಷಿಕರೊಂದಿಗೆ ಸಮಾಲೋಚಿಸಿ ಯೋಜನೆ ಪುನಃ ರೂಪಿಸುವಂತೆ ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡಿ, ಸಮುದಾಯಗಳ ಸಮಸ್ಯೆಗಳನ್ನು ಆಲಿಸಬೇಕು. ಆಯವ್ಯಯದಲ್ಲಿ ಘೋಷಿಸಲಾದ ಮೌಲಾನಾ ಆಝಾದ್ ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ಉನ್ನತೀಕರಣ, ಮಹಿಳಾ ಕಾಲೇಜು ಪ್ರಾರಂಭ ಮತ್ತಿತರ ಯೋಜನೆಗಳನ್ನು ತ್ವರಿತವಾಗಿ ಪ್ರಾರಂಭಿಸಲು ಮುಖ್ಯಮಂತ್ರಿ ಸೂಚಿಸಿದರು.
ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಪರಿಶೀಲನೆಗೆ ಸಮಿತಿ:
ರಾಜ್ಯಸಭಾ ಸದಸ್ಯ ಡಾ.ಮನ್ಸೂರ್ ಅಲಿ ಖಾನ್ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಶಿಕ್ಷಣ ಕುರಿತಂತೆ ಸಮಿತಿ ರಚಿಸಲಾಗಿದೆ. ಅಂತೆಯೇ ಹಾಸ್ಟೆಲ್ ಗಳಲ್ಲಿ ನೀಡುವ ಭೋಜನ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಶಾಸಕ ಯಾಸಿರ್ ಪಠಾಣ್ ಅಧ್ಯಕ್ಷತೆಯ ಸಮಿತಿ ಹಾಗೂ ದಕ್ಷಿಣ ಭಾಗದಲ್ಲಿ ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅಧ್ಯಕ್ಷತೆಯ ಸಮಿತಿ ಪ್ರವಾಸ ಮಾಡಿ ವರದಿ ಸಲ್ಲಿಸಿದೆ. ಇದರ ಆಧಾರದಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ಸಂದರ್ಭದಲ್ಲಿ ಆಯ್ದ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳೇ ನಡೆಸುವ ಮೆಸ್ ಅನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಇಲಾಖೆಯು ರೂಪಿಸಿರುವ ಉತ್ತಮ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವಂತೆ ಶಿವಕುಮಾರ್ ಸೂಚಿಸಿದರು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಶದ್, ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್, ಮಾಜಿ ಸಚಿವ ರಹೀಂ ಖಾನ್, ವಕ್ಫ್ ಮಂಡಳಿ ಅಧ್ಯಕ್ಷ ಅಲಿ ಬಾಬಾ ಹುಸೇನಿ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಲ್ತಾಫ್ ಖಾನ್, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಫ್ರೊ.ಜಾಫೆಟ್, ಹಜ್ ಸಮಿತಿ ಅಧ್ಯಕ್ಷ ಟಿಪ್ಪು, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಭಾಗವಹಿಸಿದ್ದರು.






