ಕರ್ನಾಟಕದಲ್ಲಿ SSRಗೆ ಚುನಾವಣಾ ಆಯೋಗದಿಂದ ಆದೇಶ; ಮತದಾರರ ಪಟ್ಟಿಯಿಂದ ಹೊರಗುಳಿದವರಿಗೆ ಸೇರ್ಪಡೆಗೆ ಅವಕಾಶ; ಡಿ.1ರಿಂದ ಪ್ರಕ್ರಿಯೆ ಆರಂಭ

ಚುನಾವಣಾ ಆಯೋಗ | Photo Credit : PTI
ಬೆಂಗಳೂರು: ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಿಂದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ 99 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ತೆಗೆದುಹಾಕಿದ ಕೆಲವೇ ವಾರಗಳ ಬಳಿಕ, ರಾಜ್ಯದಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ.
ಈ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರು ಹಾಗೂ ಮೊದಲ ಬಾರಿಗೆ ಮತದಾರರಾಗುವವರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದಕ್ಕೆ ಆದ್ಯತೆ ನೀಡಲಾಗುತ್ತದೆ.
ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ಡಿ. 1ರಂದು ಸಂಯೋಜಿತ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವುದರೊಂದಿಗೆ SSR ಪ್ರಕ್ರಿಯೆಯ ಸಾರ್ವಜನಿಕ ಹಂತ ಆರಂಭವಾಗಲಿದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಸೇರ್ಪಡೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. 31ರವರೆಗೆ ಅವಕಾಶವಿದೆ. ಜ. 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಕ್ರಿಯೆಯಲ್ಲಿ ಸುರಕ್ಷತೆ ಖಚಿತಪಡಿಸಲು ಚುನಾವಣಾ ಆಯೋಗ ಹಲವು ಕ್ರಮಗಳನ್ನು ನಿಗದಿಪಡಿಸಿದೆ. ಒಂದು ಮತಗಟ್ಟೆಯ ವ್ಯಾಪ್ತಿಯಲ್ಲಿ ಶೇ. 2ಕ್ಕಿಂತ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಿದರೆ ಅಥವಾ ಒಬ್ಬ ವ್ಯಕ್ತಿ ಐದು ಪ್ರಕರಣಗಳಲ್ಲಿ ಆಕ್ಷೇಪಣೆ ಸಲ್ಲಿಸಿದರೆ, ಚುನಾವಣಾ ನೋಂದಣಾಧಿಕಾರಿಗಳು (ERO) ಆಯಾ ಪ್ರಕರಣಗಳನ್ನು ಖುದ್ದಾಗಿ ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ.
ಪ್ರತಿಯೊಂದು ಹೆಸರು ಅಳಿಸುವ ಪ್ರಕರಣದಲ್ಲೂ ಚುನಾವಣಾ ನೋಂದಣಾಧಿಕಾರಿಗಳು ಕಾರಣಗಳನ್ನು ವಿವರಿಸುವ ತಾರ್ಕಿಕ ಆದೇಶ ಹೊರಡಿಸಬೇಕು. ಸಂಬಂಧಪಟ್ಟ ವ್ಯಕ್ತಿಗೆ ವಿಚಾರಣೆಯಲ್ಲಿ ತನ್ನ ವಾದ ಮಂಡಿಸಲು ಅವಕಾಶ ನೀಡಬೇಕು. ಅಲ್ಲದೆ, ಹೊರಡಿಸಿದ ಆದೇಶವನ್ನು ECINETನಲ್ಲಿ ಅಪ್ ಲೋಡ್ ಮಾಡಬೇಕು ಎಂದು ಚುನಾವಣಾ ಆಯೋಗ ನಿರ್ದೇಶಿಸಿದೆ.
SSR ಪ್ರಕ್ರಿಯೆಗೆ ನಿಯೋಜಿಸಲಾದ ಅಧಿಕಾರಿಗಳನ್ನು ಡಿ. 1ರಿಂದ ಜ. 20, 2027ರವರೆಗೆ, ಅಂದರೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವವರೆಗೆ, ಚುನಾವಣಾ ಆಯೋಗದ ಅನುಮತಿಯಿಲ್ಲದೆ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.






