ಜೀವಸಂಕುಲಗಳಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಿ : ಡಾ.ಜಿ.ಪರಮೇಶ್ವರ್ ಸೂಚನೆ

ಡಾ.ಜಿ.ಪರಮೇಶ್ವರ್ | Photo credit : @DrParameshwara
ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಉದ್ಯೋಗ ಸೃಷ್ಟಿ ಹಾಗೂ ಕೃಷಿ ಚಟುವಟಿಕೆಗಳಿಗೆ ಮೊದಲ ಆದ್ಯತೆ ನೀಡುವಂತೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆ ಹಾಗೂ ಉದ್ಯೋಗ’ ಕುರಿತ ವೀಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಶೇ.68ರಷ್ಟು ಮಳೆ ಕೊರತೆಯಾಗಿದ್ದು, ಕೆಲವು ಭಾಗಗಳಲ್ಲಿ ಶೇ.48ರಷ್ಟು ಮಳೆ ಅಭಾವ ದಾಖಲಾಗಿದೆ. ಸುಮಾರು 88 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ನಾಲ್ಕು ಮೀಟರ್ಗೂ ಹೆಚ್ಚು ಕುಸಿದಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.
ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಟ್ಯಾಂಕರ್ ಮೂಲಕ ನೀರು ಪೂರೈಸುವ ಗ್ರಾಮಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಜಲಾಶಯದ ನೀರನ್ನು ಬೆಳೆಗಳಿಗೆ ಬಳಸಬಾರದು ಎಂಬುದು ಸರ್ಕಾರದ ಸ್ಪಷ್ಟ ನಿರ್ದೇಶನವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯವಿರುವ 329 ಕೋಟಿ ರೂ. ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಹೊಸದಾಗಿ ಕೊರೆಸುವ ಕೊಳವೆಬಾವಿಗಳಿಗೆ ತ್ವರಿತವಾಗಿ ಮೋಟಾರ್ ಪಂಪ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯನಗರ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಜನರು ಗುಳೆ ಹೋಗುತ್ತಿರುವುದು ಕಳವಳಕಾರಿ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸಲು ವಿಬಿ ಜಿ ರಾಮ್ ಜಿ ಯೋಜನೆಯನ್ನು ತ್ವರಿತವಾಗಿ ಆರಂಭಿಸಬೇಕು. ರಾಜ್ಯದ ಸುಮಾರು 5,000 ಗ್ರಾಮ ಪಂಚಾಯಿತಿಗಳ ಪೈಕಿ 2,443 ಪಂಚಾಯಿತಿಗಳಲ್ಲಿ ಇನ್ನೂ ಕಾಮಗಾರಿ ಆರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
75 ತಾಲ್ಲೂಕುಗಳಲ್ಲಿ ನಾಲ್ಕು ವಾರಗಳಿಂದ ಒಣಹವೆ ಮುಂದುವರಿದಿದ್ದು, ಅದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಬೇಕು. ಮೆಕ್ಕೆಜೋಳ ಹಾಗೂ ಕಬ್ಬಿನಂತಹ ಅಧಿಕ ನೀರು ಬೇಡುವ ಬೆಳೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ನೀರಿನ ಮೂಲ ಇರುವ ರೈತರಿಗೆ ಮೇವು ಬೀಜ ವಿತರಿಸಿ, ಮೇವು ಉತ್ಪಾದಕರಿಂದ ಖರೀದಿ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.
2023ರಲ್ಲಿ ಜಲಾಶಯಗಳಲ್ಲಿ ಸಾಕಷ್ಟು ನೀರು ಇದ್ದ ಕಾರಣ ಬರದ ತೀವ್ರತೆ ಕಡಿಮೆಯಾಗಿತ್ತು. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದ್ದು, ಪ್ರತಿ ವಾರ ಟಾಸ್ಕ್ಫೋರ್ಸ್ ಸಭೆ ನಡೆಸಿ ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತುಮಕೂರಿನಲ್ಲಿ ರೈತರ ಆತ್ಮಹತ್ಯೆ ನಡೆದಿರುವ ಘಟನೆ ಉಲ್ಲೇಖಿಸಿದ ಡಾ. ಪರಮೇಶ್ವರ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ತಕ್ಷಣ ಅಗತ್ಯ ಕ್ರಮ ಕೈಗೊಂಡು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.






