ಗಾಯಕಿ ಎಸ್.ಜಾನಕಿ ನಿಧನ: ಸಿಎಂ ಸಹಿತ ಗಣ್ಯರ ಕಂಬನಿ

ಎಸ್.ಜಾನಕಿ(PC : x/@CMofKarnataka
ಬೆಂಗಳೂರು : ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಂದೇ ಖ್ಯಾತಿಗಳಿದ್ದ ಎಸ್. ಜಾನಕಿ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.
ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ’ ಎಂದಿದ್ದಾರೆ.
‘ಅನೇಕ ಗಾಯಕರನ್ನು ಪ್ರೋತ್ಸಾಯಿಸಿ ಬೆಳೆಸಿದ, ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಶಿವಕುಮಾರ್ ಪ್ರಾರ್ಥಿಸಿದ್ದಾರೆ.
ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ: ‘ತಮ್ಮ ಮಧುರ ಕಂಠದಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಮಹಾನ್ ಗಾಯಕಿ ಜಾನಕಿ ಅವರು. ಮೈಸೂರಿನಲ್ಲಿ ನೆಲೆಸಿದ್ದ ಅವರು ಕನ್ನಡಿಗರಿಗೆ ಬಹು ಅಚ್ಚುಮೆಚ್ಚಿನ ಗಾಯಕರಾಗಿದ್ದರು. ಅವರ ನಿಧನ ಗಾನಲೋಕದಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಆದರೂ ಅವರು ಬಿಟ್ಟು ಹೋಗಿರುವ ಸಂಗೀತ ಸಂಪತ್ತು ಅಮರ, ಅಜರಾಮರ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.






