ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಹೊಂದಿರುವುದಾಗಿ ಸುಳ್ಳು ಮಾಹಿತಿ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ಎಫ್ಐಆರ್

ಅರ್ನಬ್ ಗೋಸ್ವಾಮಿ/ಅಮಿತ್ ಮಾಳವೀಯ
ಬೆಂಗಳೂರು : ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ನೋಂದಾಯಿತ ಕಚೇರಿಯನ್ನು ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದಡಿ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಯುವ ಕಾಂಗ್ರೆಸ್ನ ಕಾನೂನು ಘಟಕದ ಮುಖ್ಯಸ್ಥ ಬಿ.ಎನ್.ಶ್ರೀಕಾಂತ್ ಸ್ವರೂಪ್ ಎಂಬುವರು ನೀಡಿದ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್-192 (ಗಲಭೆ ಸೃಷ್ಟಿಸುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿಭಂಗಕ್ಕೆ ಪ್ರಚೋದನೆ) ಅಡಿಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟರ್ಕಿಯ ಇಸ್ತಾನ್ಬುಲ್ನಲ್ಲಿರುವ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಐಎನ್ಸಿ) ಕಚೇರಿಯಾಗಿದೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿರುವ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಅದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದು ಭಾರತದ ರಾಷ್ಟ್ರೀಯ ಪಕ್ಷವೊಂದರ ಕುರಿತು ದೇಶದ ಪ್ರಜೆಗಳಲ್ಲಿ ತಪ್ಪು ಭಾವನೆ ಮೂಡಿಸುವ ಸಂಚಿನ ಭಾಗವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.







