ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಐದು ಮಂದಿ ಸಾಧಕರು ಆಯ್ಕೆ

ಬೆಂಗಳೂರು: 2025ನೆ ಸಾಲಿನ ರಾಜ್ಯ ಮಟ್ಟದ ಪ್ರತಿಷ್ಠಿತ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಪ್ರಕಟವಾಗಿದ್ದು, ಪತ್ರಕರ್ತ ನಾಗರಾಜು ಗಾಣದ ಹುಣಸೆ, ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಸೇರಿದಂತೆ ಐದು ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾಧ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ನಾಗರಾಜು ಗಾಣದ ಹುಣಸೆ, ರಂಗಭೂಮಿ ಕ್ಷೇತ್ರದಲ್ಲಿ ಚಿತ್ರದುರ್ಗದ ಪಿ.ತಿಪ್ಪೇಸ್ವಾಮಿ, ಸಂಘಟನೆ ಕ್ಷೇತ್ರದಲ್ಲಿ ಕೊಡಗು ಜಿಲ್ಲೆಯ ಜೆ.ಕೆ.ಮುತ್ತಮ್ಮ, ಸಮಾಜ ಸೇವೆ ಕ್ಷೇತ್ರದಲ್ಲಿ ವಿಜಯಪುರದ ಮಳಸಿದ್ದ ಲಕ್ಷ್ಮಣ ನಾಯಕೋಡಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ವಿಜಯನಗರ ಜಿಲ್ಲೆಯ ಕೆ.ಉಚ್ಚಂಗಪ್ಪ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರನ್ನು ಪ್ರತಿ ವರ್ಷ ಆಯ್ಕೆ ಮಾಡಲಾಗುತ್ತಿದೆ. ಅದರಂತೆ ಅ.3ರಂದು ನಡೆದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಸಕ್ತ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ.
ಇಂದು ಪ್ರಶಸ್ತಿ ಪ್ರದಾನ:
ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ 20 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ. ಪ್ರಶಸ್ತಿಗಳನ್ನು ನಾಳೆ (ಅ.7) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯುವ ವಾಲ್ಮೀಕಿ ಜಯಂತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ನಗದು ಮೊತ್ತ ಹಾಗೂ ಬಂಗಾರದ ಪದಕಗಳ ಮೌಲ್ಯವನ್ನು ಒಳಗೊಂಡಿದೆ.







