ಸಂಚಾರ ದಟ್ಟಣೆ ನಿಯಂತ್ರಣಕ್ಕೆ ‘ಬೆಂಗಳೂರು ಅರ್ಬನ್ ಮೊಬಿಲಿಟಿ ಮಿಷನ್’ ತಂಡ ರಚನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದ ಪ್ರಮುಖ ಸಮಸ್ಯೆಯಾದ ಟ್ರಾಫಿಕ್ ದಟ್ಟಣೆಯನ್ನು ನಿಯಂತ್ರಿಸಲು ಬಿಎಂಟಿಸಿ, ಬಿಎಂಆರ್‌ಸಿಎಲ್ ಮತ್ತು ಖಾಸಗಿ ಸಹಭಾಗಿತ್ವದೊಂದಿಗೆ ‘ಬೆಂಗಳೂರು ಅರ್ಬನ್ ಮೊಬಿಲಿಟಿ ಮಿಷನ್’ ತಂಡವನ್ನು ರಚಿಸಲಾಗುವುದು. ಮೂರು ದಿನಗಳೊಳಗೆ ಇದರ ಸಂಪೂರ್ಣ ನೀಲಿ ನಕ್ಷೆಯನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಜಾಗತಿಕ ಮಟ್ಟದಲ್ಲಿ 4ನೇ ಅತಿ ದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿರುವುದರಿಂದ ಇಲ್ಲಿ ಸೈಬರ್ ಅಪರಾಧಗಳೂ ಸಹ ಹೆಚ್ಚುತ್ತಿವೆ. ಸೈಬರ್ ಅಪರಾಧಿಗಳನ್ನು ಮಟ್ಟಹಾಕಲು ಗೃಹ ಇಲಾಖೆ, ಐಟಿ-ಬಿಟಿ ಮತ್ತು ಇ-ಆಡಳಿತ ಇಲಾಖೆಗಳನ್ನು ಒಗ್ಗೂಡಿಸಿ ಸಮಗ್ರ ನೀತಿಯನ್ನು ತರಲಾಗುವುದು. ಮುಂದಿನ ವಾರ ಖಾಸಗಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ಸಭೆ ನಡೆಸಿ, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ‘ಸೇಫ್ಟಿ ಗಾರ್ಡ್ ರೈಲ್ಸ್’ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರೌಡಿ ಹಾಗೂ ಕ್ರಿಮಿನಲ್ ಹಿನ್ನೆಲೆ ಇರುವವರ ಜೊತೆ ಪೊಲೀಸರು ನಿಕಟ ಸಂಪರ್ಕ ಹಾಗೂ ಸೆಲ್ಫಿ ತೆಗೆದುಕೊಳ್ಳುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ರೌಡಿ ನಿಗ್ರಹ ದಳ ರಚಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೆಳಹಂತದ ಪೊಲೀಸ್ ಅಧಿಕಾರಿಗಳು ರೌಡಿಗಳ ಜನ್ಮದಿನದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಊಟಕ್ಕೆ ಹೋಗುವುದು ಅಥವಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದರು.
ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಪ್ರಕರಣ ದಾಖಲಾದ ನಂತರ ಚಾರ್ಜ್‍ಶೀಟ್ ಸಲ್ಲಿಸಲು ಉದ್ದೇಶಪೂರ್ವಕವಾಗಿ ವಿಳಂಬ ಮಾಡುವ ಅಥವಾ ಪ್ರಾಸಿಕ್ಯೂಷನ್‍ನಲ್ಲಿ ತಾರತಮ್ಯ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಸಿದರು.
ಡ್ರಗ್ಸ್ ದಂಧೆ ಕಡಿವಾಣಕ್ಕಾಗಿ ನೀಲನಕ್ಷೆ: ಮಾದಕ ದ್ರವ್ಯ ಜಾಲದ ವಿರುದ್ಧ ಗೃಹ ಇಲಾಖೆ ಸಮರ ಸಾರಿದೆ. ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಂದ ಸಣ್ಣ ಪ್ರಮಾಣದಲ್ಲಿ ಬರುವ ಮಾತ್ರೆಗಳು ಹಾಗೂ ಸೈಕೋಟ್ರೋಪಿಕ್ ಪದಾರ್ಥಗಳನ್ನು ಪತ್ತೆಹಚ್ಚಲು ಗಡಿಭಾಗಗಳಲ್ಲಿ ಹೆಚ್ಚಿನ ಟೆಸ್ಟಿಂಗ್ ಕಿಟ್‍ಗಳನ್ನು ಒದಗಿಸಲಾಗುವುದು. ವಿದೇಶಿ ಪ್ರಜೆಗಳ ಕಾನೂನುಬಾಹಿರ ವಾಸ್ತವ್ಯ ಹಾಗೂ ಗಡಿಪಾರು ಪ್ರಕ್ರಿಯೆಯನ್ನು ವೇಗಗೊಳಿಸಲು ಕೇಂದ್ರ ಸರಕಾರದ ವಿದೇಶಾಂಗ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. ಈ ಇಡೀ ನಿಯಂತ್ರಣ ಪ್ರಕ್ರಿಯೆಗೆ ಜಾಗತಿಕ ಮಟ್ಟದ ಅತ್ಯುತ್ತಮ ಮಾದರಿಗಳನ್ನು ಅಧ್ಯಯನ ಮಾಡಿ, ಮುಂದಿನ ಎರಡು ವಾರಗಳಲ್ಲಿ ಸಮಗ್ರ ನೀಲಿ ನಕ್ಷೆ ಸಿದ್ಧಪಡಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.






