ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ಅವರ ಪುತ್ರ ಚೇತನ್ ಗೌಡ, ಆಮ್ ಆದ್ಮಿ ಪಕ್ಷದ ಬ್ರಿಜೇಶ್ ಕಾಳಪ್ಪ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿವಿಧ ನಾಯಕರು ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್.ಆರ್.ಶಿವರಾಮೇಗೌಡ ಜೆಡಿಎಸ್ ಪಕ್ಷದಿಂದ ಸಂಸದರಾಗಿದ್ದರು. ಇಂದು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ವಾಪಸ್ ಆಗುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿವಿಧ ನಾಯಕರು ಹಂತ ಹಂತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.
ಎಐಸಿಸಿ ರಾಷ್ಟ್ರೀಯ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಕಾರಣಾಂತರಗಳಿಂದ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದರು. ಇಂದು ಪುನಃ ಕಾಂಗ್ರೆಸ್ ಸೇರುತ್ತಿರುವುದು ಸಂತಸದ ವಿಚಾರ. ಮೂಲ ಕಾಂಗ್ರೆಸ್ಸಿಗರಾದ ತಾವು, ಕಾಂಗ್ರೆಸ್ ಪಕ್ಷದಲ್ಲೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನಿರ್ಧರಿಸಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಭವಿಷ್ಯವಿದೆ ಎಂದು ಮನದಟ್ಟು ಮಾಡಿಕೊಂಡು ಇಂದು ನಮ್ಮ ಪಕ್ಷ ಸೇರುತ್ತಿದ್ದಾರೆ. ಈ ಇಬ್ಬರು ನಾಯಕರು ಹಾಗೂ ಅವರ ಕಾರ್ಯಕರ್ತರಿಗೆ ಪಕ್ಷದ ಪರವಾಗಿ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ಎಲ್ಲಾ ನದಿಗಳು ಸಮುದ್ರ ಸೇರುವಂತೆ ಎಲ್ಲಾ ಪಕ್ಷಗಳ ನಾಯಕರು ನಮ್ಮ ಸಿದ್ಧಾಂತ, ನಾಯಕತ್ವ ಒಪ್ಪಿ ಪಕ್ಷ ಸೇರುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಪಕ್ಷಕ್ಕೆ ಸೇರುವವರ ಪಟ್ಟಿಯಲ್ಲಿ ಇನ್ನು ಬೇರೆ ನಾಯಕರು, ಶಾಸಕರು ಇದ್ದಾರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ದೊಡ್ಡ ಪಟ್ಟಿ ಇದೆ. ಕೆಲವು ನಾಯಕರ ಬಗ್ಗೆ ಸ್ಥಳೀಯವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಬೇಕಿದೆ. ಚರ್ಚೆ ಮಾಡಿ ಹಂತ ಹಂತವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇವೆ ಎಂದರು.
ಅನ್ಯ ಪಕ್ಷದ ಶಾಸಕರು ತಮ್ಮ ಸಂಪರ್ಕದಲ್ಲಿ ಇದ್ದಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಇದು ಗೌಪ್ಯವಾದ ವಿಚಾರ. ಇದನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧವಾಗಿರಿ: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಚುನಾವಣೆಗೆ ಸಿದ್ಧವಾಗಿರಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







