ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಸಚಿವ ಬೈರತಿ ಸುರೇಶ್

ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರಕಾರ ಚಾಲನೆ ನೀಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಘೋಷಿಸಿದ್ದಾರೆ.
ಗುರುವಾರ ಈ ಕುರಿತು ಮಾಹಿತಿ ನೀಡಿರುವ ಬೈರತಿ ಸುರೇಶ್, ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು. ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಗಂಡು ಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.
ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು. ಬಡವ-ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನವೇ ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.
ಕರ್ನಾಟಕ ಒನ್, ಬೆಂಗಳೂರು ಒನ್‍ನಲ್ಲಿ ಅರ್ಜಿ: ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್‍ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಅನ್ನು ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಪಾವತಿಸಿರುವ ಹಣ ವಾಪಸ್: ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು. ನಮ್ಮ ಸರಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.






