ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು, ಸೆ.19 : ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ 545 ಪಿಎಸ್ಸೈ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲಾಗಿದೆ. 402 ಪಿಎಸ್ಸೈ ಹುದ್ದೆಗಳ ನೇಮಕಾತಿಯಲ್ಲಿ 398 ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಇದನ್ನು ಭರ್ತಿ ಮಾಡಲಾಗುವುದು ಎಂದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ, ಬ್ಯಾಂಕ್ ದರೋಡೆ ಪ್ರಕರಣಗಳ ತನಿಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಕೂಲಂಕುಶವಾಗಿ ಚರ್ಚೆ ಮಾಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಶಿಕ್ಷೆ ಪ್ರಮಾಣ ಶೇ.10 ಆಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಸಿಆರ್‌ಇ ವಿಭಾಗದ ಡಿಜಿಪಿ ಕೆ.ರಾಮಚಂದ್ರರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.







