ಸರಕಾರಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ ಸಲ್ಲಿಕೆ; ರಾಜ್ಯದಲ್ಲಿದ್ದಾರೆ 10,365 ಲಿಂಗತ್ವ ಅಲ್ಪಸಂಖ್ಯಾತರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಸಿದ್ದಪಡಿಸಿದ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ(ಟ್ರಾನ್ಸ್ ಜೆಂಡರ್) ಸಮೀಕ್ಷಾ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಶನಿವಾರ ಪ್ರಕಟನೆ ಹೊರಡಿಸಿರುವ ಅವರು, ಲಿಂಗತ್ವ ಅಲ್ಪಸಂಖ್ಯಾತರು ಎದುರಿಸುವ ಸಮಸ್ಯೆಗಳಾದ ಭಯ, ಅವಮಾನ, ಲಿಂಗ ತಾರತಮ್ಯತೆ, ಸಾಮಾಜಿಕ ತಾರತಮ್ಯ, ಖಿನ್ನತೆ, ಆತ್ಮಹತ್ಯಾ ಪ್ರವೃತ್ತಿಯಿಂದ ಅವರನ್ನು ಹೊರತರಲು ಸಮೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ತೀರ್ಮಾನ ಮಾಡಿತ್ತು. ಅದರಂತೆ 31 ಜಿಲ್ಲೆಗಳಲ್ಲಿ 2025ರ ಸೆ.15ರಿಂದ ಸಮೀಕ್ಷೆಯನ್ನು ನಡೆಸಲಾಯಿತು ಎಂದಿದ್ದಾರೆ.
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ 10250 ಜನ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ 18 ವರ್ಷದೊಳಗಿನ 115 ಲಿಂಗತ್ವ ಅಲ್ಪಸಂಖ್ಯಾತ ಮಕ್ಕಳು ಸೇರಿ ಒಟ್ಟು 10,365 ಲಿಂಗತ್ವ ಅಲ್ಪಸಂಖ್ಯಾತರು ಇದ್ದರೆ. ಅತಿ ಹೆಚ್ಚು ಲಿಂಗತ್ವ ಅಲ್ಪಸಂಖ್ಯಾತರನ್ನು ಹೊಂದಿರುವ ಮೊದಲ 5 ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆ(1,428), ಚಿಕ್ಕಬಳ್ಳಾಪುರ(1,252), ಬೆಂಗಳೂರು ನಗರ(757), ಕೋಲಾರ(638) ಮತ್ತು ಬೆಳಗಾವಿ(618) ಇರುವುದು ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.
ಸಮೀಕ್ಷೆಯಲ್ಲಿ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ, ಶೈಕ್ಷಣಿಕ ಮಾಹಿತಿ, ವಾಸಸ್ಥಳ ಹಾಗೂ ವಲಸೆ ಮಾಹಿತಿ, ಕುಟುಂಬದವರಿಂದ ಸ್ವೀಕಾರ ಹಾಗೂ ಕುಟುಂಬದ ಮೇಲಿನ ಅವಲಂಬನೆ ಮಾಹಿತಿ, ಉದ್ಯೋಗ ಮತ್ತು ಆದಾಯದ ಮಾಹಿತಿ, ಸರಕಾರಿ ಸೌಲಭ್ಯಗಳನ್ನು ಪಡೆದಿರುವ ಮಾಹಿತಿ, ಮನೆ, ನಿವೇಶನ ಹಾಗೂ ಕೃಷಿ ಭೂಮಿ ಹೊಂದಿರುವ ಮಾಹಿತಿ, ಅವರ ದೃಢೀಕರಣಕ್ಕಾಗಿ ಶಸ್ತ್ರಚಿಕಿತ್ಸೆಗೊಳಗಾದ ಮಾಹಿತಿ, ಆರೋಗ್ಯದ ಸ್ಥಿತಿಗತಿ ಮಾಹಿತಿ, ಕೌಶ್ಯಲ ತರಬೇತಿ ಮಾಹಿತಿ, ವಾಸದ ಮನೆಗಳು ಹಾಗೂ ಮೂಲಭೂತ ಸೌಕರ್ಯಗಳ ಮಾಹಿತಿಯು ಒಳಗೊಂಡಿದೆ ಎಂದು ಅವರು ವಿವರಿಸಿದ್ದಾರೆ.
ವಸತಿ ನಿಲಯಗಳಲ್ಲಿ ಆದ್ಯತೆಯ ಮೇರೆಗೆ ಲಿಂಗತ್ವ ಅಲ್ಪಸಂಖ್ಯಾತರನ್ನು ದಾಖಲಾತಿ ಮಾಡಿಕೊಳ್ಳಲು ಕ್ರಮವಹಿಸುವುದು, ಲಿಂಗತ್ವ ಅಲ್ಪಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಯೋಜನೆ ರೂಪಿಸುವುದು, ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಕೋಚಿಂಗ್ ನೀಡುವುದು, ಆರೋಗ್ಯ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ, ವಸತಿ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸೇರಿ 18 ಶಿಫಾರಸುಗಳನ್ನು ಮಾಡಿದೆ ಎಂದು ವಿವರಿಸಿದ್ದಾರೆ.
‘ರಾಜ್ಯದಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಮೂಲಹಂತದ ಸಮೀಕ್ಷೆ ನಡೆಸಲಾಗಿತ್ತು. ಈಗ ಬಂದಿರುವ ವರದಿಯನ್ನು ಆಧರಿಸಿ ಸರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ’
- ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ.
ವರದಿಯಲ್ಲಿನ ಪ್ರಮುಖ ಶಿಫಾರಸ್ಸುಗಳು
1. ಲಿಂಗತ್ವ ಅಲ್ಪಸಂಖ್ಯಾತರಿಗೆ ಎಲ್ಲ ಖಾಸಗಿ ಕಂಪೆನಿಗಳಲ್ಲಿ ಶೇ.1ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸುವುದು.
2. ಲಿಂಗತ್ವ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ದಿ ಮಂಡಳಿ ಸ್ಥಾಪಿಸುವುದು.
3. ಸರಕಾರದ ವಿವಿಧ ಇಲಾಖೆಗಳ ಮುಖಾಂತರ ಲಿಂಗತ್ವ ಅಲ್ಪಸಂಖ್ಯಾತರಿಗೆ ಆರ್ಥಿಕ ಚಟುವಟಿಕೆ ನಡೆಸಲು ಸಹಾಯಧನ ಕಾರ್ಯಕ್ರಮ ರೂಪಿಸುವುದು.
4. ಮನೆಗಳು ಇಲ್ಲದ ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಒದಗಿಸುವುದು.
5. ಸಾರ್ವಜನಿಕ ಸ್ಥಳಗಳಲ್ಲಿ ಲಿಂಗತ್ಯ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕ ಶೌಚಾಲಯ, ನಿರೀಕ್ಷಣಾ ಕೊಠಡಿಗಳು ನಿರ್ಮಾಣ ಆಗಬೇಕು.
6. ಭಿಕ್ಷಾಟನೆಯಲ್ಲಿ ತೊಡಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಮಾಜ ಕಲ್ಯಾಣ ಇಲಾಖೆಯ ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿ ಅವಕಾಶ ಕಲ್ಪಿಸಬೇಕು.
7. ವಿಶೇಷ ಕ್ಯಾಂಪ್‍ಗಳನ್ನು ಆಯೋಜಿಸಿ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರಿಗೆ ಪಡಿತರ ಚೀಟಿಗಳನ್ನು ವಿತರಿಸುವುದು.
8. ಲಿಂಗತ್ವ ಅಲ್ಪಸಂಖ್ಯಾತರಿಗೆ ಲಿಂಗತ್ವ ದೃಢೀಕರಣ ಶಸ್ತ್ರ ಚಿಕಿತ್ಸೆಗಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು.
9. ಹಿರಿಯ ನಾಗರಿಕ ಲಿಂಗತ್ವ ಅಲ್ಪಸಂಖ್ಯಾತರಿಗೆ ವೃದ್ಧಾಶ್ರಮಗಳ ಸೌಲಭ್ಯ ಕಲ್ಪಿಸಬೇಕು.







