‘ಒಂದು ಜಿಲ್ಲೆ ಒಂದು ಕ್ರೀಡೆ’ ಯೋಜನೆ ಜಾರಿಗೆ ಚಿಂತನೆ: ಸಚಿವ ಬಿ.ನಾಗೇಂದ್ರ
''ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ 1,588 ಕೋಟಿ ರೂ.ಮೀಸಲು''

ಬೆಂಗಳೂರು ಜು. 11: ‘ರಾಜ್ಯದಲ್ಲಿ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ‘ಒಂದು ಜಿಲ್ಲೆ ಒಂದು ಕ್ರೀಡೆ’ ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಿದ್ದು, ಶೀಘ್ರ ಜಾರಿಗೊಳಿಸಲಾಗುವುದು’ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರೀಡೆಗಳು ಹೆಸರು ವಾಸಿ. ವಿಜಯನಗರದಲ್ಲಿ ಕುಸ್ತಿ, ವಿಜಯಪುರದಲ್ಲಿ ಸೈಕ್ಲಿಂಗ್‍ನಂತೆ ಎಲ್ಲ ಜಿಲ್ಲೆಗಳಲ್ಲಿಯೂ ಒಂದೊಂದು ಕ್ರೀಡೆಗಳು ಹೆಸರುವಾಸಿಯಾಗಿದ್ದು, ಆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ ಸನ್ನದ್ಧಗೊಳಿಸಲಾಗುವುದು’ಎಂದು ನುಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ದೇಶದಲ್ಲಿಯೇ ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂ.ಬಜೆಟ್‍ನಲ್ಲಿ ಒದಗಿಸಿದ್ದು, ಸದರಿ ಅನುದಾನದ ಸದ್ಭಳಕೆ ಮಾಡಿಕೊಂಡು ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗುವುದು’ ಎಂದು ಅವರು ತಿಳಿಸಿದರು.
‘ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ 2013ರಿಂದ ಇಲ್ಲಿಯ ವರೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡಲಾಗಿದ್ದು, ಸರಕಾರದ ಪ್ರಯೋಜನ ಪಡೆದುಕೊಂಡಿರುವ ಪರಿಶಿಷ್ಟ ಪಂಗಡದ ಫಲಾನುಭವಿಗಳ ಜೀವನಮಟ್ಟದಲ್ಲಿ ಸುಧಾರಣೆಯಾಗಿದೆಯೇ ಎಂಬುದರ ಕುರಿತು ಇಲಾಖೆಯಿಂದ ಮೌಲ್ಯಮಾಪನ ನಡೆಸಲಾಗುವುದು ಎಂದು ಅವರು ಹೇಳಿದರು.
‘ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಈ ಬಾರಿಯ ಬಜೆಟ್‍ನಲ್ಲಿ ಸಿದ್ದರಾಮಯ್ಯ ಅವರು 1588 ಕೋಟಿ ರೂ.ಗಳನ್ನು ಒದಗಿಸಿದ್ದಾರೆ ಎಂದ ನಾಗೇಂದ್ರ, ಇದೀಗ ನೀಡಲಾಗಿರುವ ಬಜೆಟ್‍ನಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.
‘ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ರೂ.ಮೀಸಲಿಡಲಾಗುತ್ತಿದೆ ಎಂದ ಅವರು, ‘ರಾಜ್ಯದ 8 ಜಿಲ್ಲೆಗಳಲ್ಲಿ ವಾಸ ಮಾಡುತ್ತಿರುವ 11 ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು 6 ತಿಂಗಳ ಬದಲು 12 ತಿಂಗಳಿಗೆ ವಿಸ್ತರಿಸಿ 50ಕೋಟಿ ರೂ.ಗಳ ಮೀಸಲಿಡಲಾಗುತ್ತಿದೆ ಎಂದರು.
ಎಸ್ಸಿ-ಎಸ್ಟಿ ವರ್ಗಕ್ಕೆ ಸೇರಿದ 10 ಕ್ರೈಸ್ ವಸತಿ ಶಾಲೆ ಕ್ರೀಡಾ ಪ್ರೋತ್ಸಾಹಕ್ಕೆ ತಲಾ 2 ಕೋಟಿ ರೂ.ಗಳಂತೆ 20 ಕೋಟಿ ರೂ.ಮೀಸಲಿಡಲಾಗುತ್ತಿದೆ. ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿಶ್ವದಲ್ಲಿ 250 ಯೂನಿವರ್ಸಿಟಿ ರಾಂಕಿಂಗ್ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶಿ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸುತ್ತದೆ. ಈ ಯೋಜನೆ ಅನುಷ್ಠಾನಕ್ಕೆ 36 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ ಎಂದರು.







