ʼಗ್ರೇಟರ್ ಬೆಂಗಳೂರುʼ | ಐದು ನಗರ ಪಾಲಿಕೆಗಳ ಸ್ಥಾಪನೆ : ನಾಗರಿಕರಿಂದ ಆಕ್ಷೇಪಣೆ, ಸಲಹೆಗಳ ಆಹ್ವಾನ

ಬೆಂಗಳೂರು : ರಾಜ್ಯ ಸರಕಾರವು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ- 2024ರಡಿ ಬೆಂಗಳೂರಿನಲ್ಲಿ ಐದು ನಗರ ಪಾಲಿಕೆಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ನಾಗರಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿದೆ.
ಶನಿವಾರದಂದು ರಾಜ್ಯ ಸರಕಾರವು ರಾಜ್ಯ ಪತ್ರವನ್ನು ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸ ಸೌಧ, ಡಾ:ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ ಮತ್ತು ಬೆಂಗಳೂರು ಕೇಂದ್ರ ನಗರ ಪಾಲಿಕೆ ಎಂಬ ಐದು ನಗರ ಪಾಲಿಕೆಗಳ ಸ್ಥಾಪನೆಗೆ ಸರಕಾರ ಉದ್ದೇಶಿಸಿದೆ. ಈ ಬಗ್ಗೆ ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದೆ.





