ʼಗೃಹ ಆರೋಗ್ಯ ಯೋಜನೆʼಯಡಿ 185 ಕೋಟಿ ರೂ.ಅನುದಾನ ಬಳಸಿಕೊಳ್ಳಲು ಅನುಮೋದನೆ ನೀಡಿದ ಸರಕಾರ

ದಿನೇಶ್ ಗುಂಡೂರಾವ್
ಬೆಂಗಳೂರು : ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ ಯೋಜನೆ’ ಅನುಷ್ಠಾನ ಮಾಡಲು ಉದ್ದೇಶಿಸಿದ್ದು, ಯೋಜನೆಗೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ರೂ.ಗಳ ಅನುದಾನ ಬಳಸಿಕೊಳ್ಳಲು ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ. ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ ಎಂದಿದ್ದಾರೆ.
ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ. ರೋಗಗಳಿಗೆ ತುತ್ತಾದವರಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಅವರು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ' ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.







