‘ಪಠ್ಯದಲ್ಲಿ ಭಗವದ್ಗೀತೆ ಬೋಧನೆ’ : ಕೇಂದ್ರ ಶಿಕ್ಷಣ ಸಚಿವರಿಗೆ ಎಚ್.ಡಿ.ಕುಮಾರಸ್ವಾಮಿ ಪತ್ರ

ಎಚ್.ಡಿ.ಕುಮಾರಸ್ವಾಮಿ
ಹೊಸದಿಲ್ಲಿ : ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.
ಶುಕ್ರವಾರ ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ. ಭಾರತವು ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುಧೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಪ್ರಸ್ತುತತೆಯನ್ನು ಹೊಂದಿವೆ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಮೌಲ್ಯಾಧರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ ಮತ್ತು ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.







