ರಾಜ್ಯಾದ್ಯಂತ ಜೂ.11ರ ವರೆಗೆ ಭಾರೀ ಮಳೆ, ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ರಾಜ್ಯಾದ್ಯಂತ ಜೂ.11ರ ವರೆಗೆ ಭಾರೀ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.
ಜೂ.11ರ ವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಿಂಚು, ನಿರಂತರ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಕರಾವಳಿಯಲ್ಲಿ ಜೂ.6 ರಿಂದ ಜೂ.9ರವರೆಗೆ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 50 ಕಿ.ಮೀ.ಯಿಂದ 60 ಕಿ.ಮೀ. ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.






