ಅಕ್ರಮ ಬೆಟ್ಟಿಂಗ್ ಪ್ರಕರಣ; ವಿಚಾರಣಾ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನು ಕೋರಲು ಶಾಸಕ ವೀರೇಂದ್ರಗೆ ಹೈಕೋರ್ಟ್ ಅನುಮತಿ

ಕೆ.ಸಿ. ವೀರೇಂದ್ರ
ಬೆಂಗಳೂರು : ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಅವರಿಗೆ ವಿಚಾರಣಾ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ.
ವೀರೇಂದ್ರ ಅವರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಿ, ತಕ್ಷಣವೇ ಬಿಡುಗಡೆಗೊಳಿಸಲು ಆದೇಶಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್.ಡಿ. ಚೈತ್ರಾ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು, ದಸರಾ ಹಬ್ಬದ ಹಿನ್ನೆಲೆಯಲ್ಲಿ ಅರ್ಜಿದಾರರ ಪತಿಯನ್ನು ಎರಡು ದಿನ ಅವಧಿಗೆ ಮಧ್ಯಂತರ ಬಿಡುಗಡೆ ಮಾಡುವಂತೆ ಕಳೆದ ವಿಚಾರಣೆ ವೇಳೆ ನ್ಯಾಯಪೀಠವನ್ನು ಕೋರಲಾಗಿತ್ತು. ಈ ಸಂಬಂಧ ಮಾಹಿತಿ ಪಡೆದು ಒದಗಿಸುವಂತೆ ಈಡಿ ಪರ ವಕೀಲರಿಗೆ ನ್ಯಾಯಾಲಯ ಸೂಚಿಸಿತ್ತು ಎಂದರು.
ಅದಕ್ಕೆ ಈಡಿ ಪರ ವಕೀಲರು, ಅರ್ಜಿದಾರರ ಪತಿಗೆ ಜಾಮೀನು ಅಗತ್ಯವಿದ್ದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಏಕಾಏಕಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗದು ಮತ್ತು ಮಧ್ಯಂತರ ಜಾಮೀನು ಮಂಜೂರು ಮಾಡಬಾರದು ಎಂದರು.
ಆಗ ಅರ್ಜಿದಾರರ ಪರ ವಕೀಲರು, ಹಾಗಿದ್ದರೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿದರು. ಅದಕ್ಕೆ ಸಮ್ಮತಿಸಿದ ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಿತು.







