ಒಳಮೀಸಲಾತಿ ಪ್ರಶ್ನಿಸಿದ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ್; ನೇಮಕಾತಿಗೆ ಮಧ್ಯಂತರ ತಡೆ

ಬೆಂಗಳೂರು : ರಾಜ್ಯ ಸರಕಾರ ಅನುಷ್ಠಾನಗೊಳಿಸಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್, ಅರ್ಜಿಯ ಮುಂದಿನ ವಿಚಾರಣೆಯವರೆಗೆ ಒಳಮೀಸಲಾತಿಯ ರೋಸ್ಟರ್ ವರ್ಗೀಕರಣದ ಅನ್ವಯ ಯಾವುದೇ ನೇಮಕಾತಿ ಮಾಡಿಕೊಳ್ಳದಂತೆ ಸರಕಾರಕ್ಕೆ ನಿರ್ದೇಶಿಸಿದೆ.
ಸರಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ, ಬಿ.ಎಚ್.ಮಂಜುನಾಥ್ ಸೇರಿದಂತೆ 10 ಮಂದಿ ಸಲ್ಲಿಸಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ಈ ಮಧ್ಯಂತರ ಆದೇಶ ಮಾಡಿದೆ.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಾಲಯ, ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ನೋಟಿಸ್ ಜಾರಿಗೊಳಿಸಿ, ಎರಡು ವಾರಗಳಲ್ಲಿ ಆಕ್ಷೇಪ ಸಲ್ಲಿಸುವಂತೆ ಸೂಚಿಸಿ, ಅರ್ಜಿಯನ್ನು ನವೆಂಬರ್ 13ಕ್ಕೆ ವಿಚಾರಣೆಗೆ ನಿಗದಿಪಡಿಸಿತು.
ಇದೇ ವೇಳೆ, ಪ್ರಕರಣ ಸಂಬಂಧ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದಾದರೂ, ಅರ್ಜಿಯ ಮುಂದಿನ ವಿಚಾರಣೆಯವರೆಗೆ ಒಳಮೀಸಲಾತಿ ರೋಸ್ಟರ್ ವರ್ಗೀಕರಣದ ಅನ್ವಯ ಯಾವುದೇ ನೇಮಕಾತಿಗಳನ್ನು ಮಾಡಿಕೊಳ್ಳದಂತೆ ಸರಕಾರವನ್ನು ನಿರ್ಬಂಧಿಸಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.







