ಎಚ್‌ಡಿಕೆ ವಿರುದ್ಧದ ಸರಕಾರಿ ಜಮೀನು ಒತ್ತುವರಿ ಆರೋಪ; ಹೈಕೋರ್ಟ್‌ಗೆ ಜಿಲ್ಲಾಧಿಕಾರಿ ತನಿಖಾ ವರದಿ ಸಲ್ಲಿಸಿದ ಸರಕಾರ

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತಿತರರಿಂದ ನಡೆದಿದೆ ಎನ್ನಲಾದ ಕೇತಗಾನಹಳ್ಳಿ ಸರಕಾರಿ ಭೂಮಿ ಒತ್ತುವರಿಗೆ ಸಂಬಂಧಿಸದಂತೆ ರಾಮನಗರ ಜಿಲ್ಲಾಧಿಕಾರಿ ನಡೆಸಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರಕಾರವು ಹೈಕೋರ್ಟ್‌ಗೆ ತಿಳಿಸಿದೆ.
ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಹಶೀಲ್ದಾರ್ ಜಾರಿ ಮಾಡಿದ್ದ ನೋಟಿಸ್‌ಗೆ ಏಕಸದಸ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿರುವ ಮೇಲ್ಮನವಿ ಕುರಿತು ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಮೇಲ್ಮನವಿ ವಿಚಾರಣೆ ಆರಂಭವಾಗುತ್ತಿದ್ದಂತೆ ಕುಮಾರಸ್ವಾಮಿ ಪರ ವಕೀಲರು ಹಾಜರಾಗಿ, ಪ್ರಕರಣದಲ್ಲಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಉದಯ್ ಹೊಳ್ಳ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ರಾಜ್ಯ ಸರಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ರೋಣ ಅವರು, ಕಳೆದ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ರಾಮನಗರ ಜಿಲ್ಲಾಧಿಕಾರಿ ವಿವಾದಿತ ಸರಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.







