ಅವಧಿ ಪೂರ್ಣಗೊಳ್ಳುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಯಾವಾಗ ನಡೆಸುತ್ತೀರಿ?; ಸರಕಾರದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಹಾಸನ ಮಹಾನಗರ ಪಾಲಿಕೆ, ಕೋಲಾರ ನಗರಸಭೆ, ಚಿತ್ರದುರ್ಗ ನಗರಸಭೆ ಸೇರಿ ಈ ತಿಂಗಳ ಅಂತ್ಯಕ್ಕೆ ಅವಧಿ ಪೂರ್ಣಗೊಳ್ಳಲಿರುವ 40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಯಾವಾಗ ನಡೆಸಲಾಗುವುದು ಎಂಬ ಬಗ್ಗೆ ಬುಧವಾರದೊಳಗೆ ನಿಲುವು ತಿಳಿಸುಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ಐದು ವರ್ಷದ ಅಧಿಕಾರವಧಿಗೆ ಪರಿಗಣಿಸದಂತೆ ಹಾಗೂ ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗದಂತೆ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ 40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿದಾರರೊಬ್ಬರ ಪರ ಹಿರಿಯ ವಕೀಲ ಎಸ್. ಬಸವರಾಜ್ ವಾದ ಮಂಡಿಸಿ, ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲು ವಿಳಂಬವಾದ ಕಾರಣ ಆಯಾ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರಕಾರ ಆಡಳಿತಾಧಿಕಗಳನ್ನು ನೇಮಕ ಮಾಡಿತ್ತು. ಈ ರೀತಿ ಸುಮಾರು 16 ತಿಂಗಳ ಕಾಲ ಚುನಾಯಿತ ಸದಸ್ಯರು ಅಧಿಕಾರದಿಂದ ವಂಚಿತರಾಗಿದ್ದರು. ಆದ್ದರಿಂದ, ಆಡಳಿತಾಧಿಕಾರಿಯ ಅವಧಿಯನ್ನು ಒಟ್ಟು ಐದು ವರ್ಷದ ಅಧಿಕಾರಿವಧಿಗೆ ಪರಿಗಣಿಸಬಾರದು. ಅಷ್ಟಕ್ಕೂ ಈ ತಿಂಗಳ ಅಂತ್ಯಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ತಿಳಿಸಿ ಸರಕಾರ ವೇಳಾಪಟ್ಟಿ ಪ್ರಕಟಿಸಿದರೆ, ಅರ್ಜಿದಾರರು ತಮ್ಮ ಮನವಿಯನ್ನು ಮುಂದುವರಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಸರಕಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರೆ ತಮ್ಮ ಮನವಿಯನ್ನು ಮುಂದುವರಿಸುವುದಿಲ್ಲ ಎಂದು ಅರ್ಜಿದಾರರು ಹೇಳುತ್ತಿದ್ದಾರೆ. ಹೀಗಿದ್ದಾಗ, ಸರಕಾರ ನಿಲುವು ತಿಳಿಸಬೇಕಾಗುತ್ತದೆ. ಆಗ ವಿವಾದ ಇತ್ಯರ್ಥಗೊಳ್ಳುತ್ತದೆ. ಅದರಂತೆ, ಅವಧಿ ಪೂರ್ಣಗೊಳ್ಳಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಯಾವಾಗ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.
ಇದೇ ವೇಳೆ, ಈ ನಗರ ಸ್ಥಳೀಯ ಸಂಸ್ಥೆಗಳಿಗೆ ಸದ್ಯ ಆಡಳಿತಾಧಿಕಾರಿ ನೇಮಕ ಮಾಡಬಾರದು ಎಂದು ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ನ್ಯಾಯಾಲಯ ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.







