ಅವಧಿ ಪೂರ್ಣಗೊಂಡ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ; ಸರಕಾರದ ಆದೇಶ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು : ಅವಧಿ ಪೂರ್ಣಗೊಳಿಸಿದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಅಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರಾವಧಿಗೆ ಪರಿಗಣಿಸದಂತೆ ಕೋರಿ ಹಾಗೂ ಈಗ ಅವಧಿ ಮುಗಿದ ಕಾರಣ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ರಾಜ್ಯದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಆಡಳಿತಾಧಿಕಾರಿ ನೇಮಕದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತಲ್ಲದೇ, ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ 71 ಅರ್ಜಿಗಳನ್ನು ಇತ್ಯರ್ಥಪಡಿಸಿತು.
ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಕ್ಷೇತ್ರ ಮರುವಿಂಗಡಣೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಸಂವಿಧಾನದ ಪರಿಚ್ಛೇದ 243(ಯು)ನಂತೆ ಸದಸ್ಯರ ಅವಧಿ 5 ವರ್ಷ ನಿಗದಿಯಾಗಿದೆ. ಅವಧಿ ಮುಗಿದ ಮೇಲೆ ಹಾಲಿ ಸದಸ್ಯ, ಅಧ್ಯಕ್ಷರನ್ನು ಮುಂದುವರಿಸಲಾಗದು. ಆದ್ದರಿಂದ, ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಪ್ರಕರಣದ ಹಿನ್ನೆಲೆ:
2025ರ ಅಕ್ಟೋಬರ್ 18ರಿಂದ ನವೆಂಬರ್ 6ರವರೆಗೆ 5 ವರ್ಷದ ಅಧಿಕಾರಾವಧಿ ಮುಕ್ತಾಯಗೊಂಡಿರುವ 42 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಗಳು ಸೇರಿ ರಾಜ್ಯದ ಒಟ್ಟು 118 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ನವೆಂಬರ್ 5ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.







