ಸರ್ಕಾರಿ ಶಾಲೆಯ ಜಾಗದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಪ್ರಶ್ನಿಸಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿರುವ 32 ವರ್ಷ ಹಳೆಯ ಸರ್ಕಾರಿ ಶಾಲೆಯ ಜಾಗದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸ್ಥಳೀಯ ಶಾಲಾ ಅಭಿವೃದ್ದಿ ಹಾಗೂ ಮೇಲಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ, ಬಸವನಬಾಗೇವಾಡಿ ಬಿಇಒ, ಕೊಲ್ಹಾರ ಪಟ್ಟಣ ಪಂಚಾಯಿತಿ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಪ್ರಕರಣದಲ್ಲಿ ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಿರ್ದೇಶಿಸಿ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತು.
ಕೊಲ್ಹಾರ ಪಟ್ಟಣದ ವಾರ್ಡ್ ನಂಬರ್ 7ರಲ್ಲಿ ಸರ್ಕಾರಿ ಬಾಲಕರ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಶಾಲೆ ಇದೆ. ಈ ಶಾಲಾ ಕಟ್ಟಡಗಳನ್ನು 1993ರಲ್ಲಿ ನಿರ್ಮಾಣ ಮಾಡಲಾಗಿದೆ. ಈ ಶಾಲೆಯಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಈ ಜಾಗದಲ್ಲಿ ಮಿನಿ ವಿಧಾನಸೌಧ ಕಟ್ಟಲಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.






