ಕೃಷ್ಣ ಜೆ.ರಾವ್ ವಿರುದ್ಧದ ಅತ್ಯಾಚಾರ ಪ್ರಕರಣ; ಮಧ್ಯಸ್ಥಿಕಾ ಕೇಂದ್ರಕ್ಕೆ ಹಾಜರಾಗಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದಾಗಿ ಆರೋಪಿ ಪರ ವಕೀಲರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಜೂನ್ 19ರಂದು ಮಧ್ಯಸ್ಥಿಕಾ ಕೇಂದ್ರಕ್ಕೆ ಹಾಜರಾಗುವಂತೆ ಸಂತ್ರಸ್ತೆ ಹಾಗೂ ಆರೋಪಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲರ ಪಿ.ಪಿ. ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನ್ನು ನ್ಯಾಯಾಲಯಕ್ಕೆ ತಿಳಿಸಿದರು.
ಅದರಂತೆ, ಜೂನ್ 19ರಂದು ಪ್ರಕರಣದ ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟವರು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಲು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿತು.
ಇದಕ್ಕೂ ಮೊದಲು, ಹೈಕೋರ್ಟ್‌ನಲ್ಲಿ ಠೇವಣಿ ಇಡಲಾದ ಸಂತ್ರಸ್ತೆಗೆ ನೀಡಬೇಕಾದ ಮೊದಲ ತಿಂಗಳ ಜೀವನಾಂಶ ಪರಿಹಾರ ಮೊತ್ತ 75 ಸಾವಿರ ರೂ.ಗಳನ್ನು ಸಂತ್ರಸ್ತೆಗೆ ಪಾವತಿಸಲು ಸೂಚಿಸಿತು. 2ನೇ ತಿಂಗಳ ಪರಿಹಾರ ಮೊತ್ತ 75 ಸಾವಿರ ರೂ.ಗಳನ್ನು 4 ದಿನಗಳಲ್ಲಿ ಪಾವತಿಸಲು ಆರೋಪಿ ಕೃಷ್ಣರಾವ್‌ಗೆ ನ್ಯಾಯಪೀಠ ಸೂಚಿಸಿತು.






