ಯೋಗೀಶ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಬೇಕೆಂಬ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರ ಮಧ್ಯಂತರ ಮನವಿ ಕುರಿತ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದರಿಸಿದೆ.
ಜೀವಾವಧಿ ಶಿಕ್ಷೆ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದು ಕೋರಿ ಕ್ರಿಮಿನಲ್ ಅರ್ಜಿ ಸಲ್ಲಿಸಿರುವ ವಿನಯ್ ಕುಲಕರ್ಣಿ, ಶಿಕ್ಷೆಯನ್ನು ಅಮಾನತುನಲ್ಲಿಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.
ಈ ಮಧ್ಯಂತರ ಮನವಿ ಕುರಿತಂತೆ ಕುಲಕರ್ಣಿ ಪರ ವಕೀಲರು ಈಗಾಗಲೇ ವಾದ ಪೂರ್ಣಗೊಳಿಸಿದ್ದರು. ಸಿಬಿಐ ಪರ ವಕೀಲರು ಗುರುವಾರ ಪ್ರತಿವಾದ ಪೂರ್ಣಗೊಳಿಸಿದರು. ಇದರಿಂದ, ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ ಮಧ್ಯಂತರ ಮನವಿ ಕುರಿತ ತೀರ್ಪು ಕಾಯ್ದಿರಿಸಿತು.
ಜೀವಾವಧಿ ಶಿಕ್ಷೆಗೆ ಒಳಗಾದ ಕಾರಣ ಸದ್ಯ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಒಂದು ವೇಳೆ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದರೆ ಮಾತ್ರ ಶಾಸಕ ಸ್ಥಾನ ಮರಳಲಿದೆ. ಇದರಿಂದ, ಹೈಕೋರ್ಟ್ ಜಾಮೀನನ ಆದೇಶವು ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಭವಿಷ್ಯ ನಿರ್ಧರಿಸಲಿದೆ.
2016ರಲ್ಲಿ ನಡೆದಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 17 ಮಂದಿಯನ್ನು ಅಪರಾಧಿಗಳು ಎಂದು ತೀರ್ಮಾನಿಸಿ 2026ರ ಏಪ್ರಿಲ್ 15ರಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಏಪ್ರಿಲ್ 17ರಂದು ವಿನಯ ಕುಲಕರ್ಣಿ, ಚಂದ್ರಶೇಖರ ಇಂಡಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.






