ಮಾನಸಿಕ ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಗುಂಪು ಥಳಿತ; ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಹೈಕೋರ್ಟ್ ತಾಕೀತು

ಬೆಂಗಳೂರು : ‘ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸಣಾಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರತಿಯೊಬ್ಬ ವ್ಯಕ್ತಿಯನ್ನೂ ಹಿಡಿದು ಪ್ರಕರಣ ದಾಖಲಿಸಬೇಕು’ ಎಂದು ಹೈಕೋರ್ಟ್ ಪೊಲೀಸರಿಗೆ ತಾಕೀತು ಮಾಡಿದೆ.
‘ನನ್ನ ವಿರುದ್ಧ ಯಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಚಾಮರಾಜನಗರ ತಾಲೂಕಿನ ಮಸಣಾಪುರದ ಉಪ್ಪಾರ ಬೀದಿಯ ಚಂದ್ರು ಬಿನ್ ಶಿವಣ್ಣ (19) ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಹಲ್ಲೆ ನಡೆಸಲಾದ ಘಟನೆಯ ವೀಡಿಯೊ ಇದೆ. ಅದರ ನೆರವಿನಿಂದ ಎಲ್ಲ ಹಲ್ಲೆಕೋರರನ್ನೂ ಹಿಡಿದು ಪ್ರಕರಣ ದಾಖಲಿಸಬೇಕು. ಇಂತಹ ಪ್ರಕರಣದ ತನಿಖೆ ಆಮೆ ವೇಗದಲ್ಲಿ ನಡೆಯುವಂತಾಗಬಾರದು. ಈವರೆಗೂ ನಡೆದಿರುವ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಿದೆ.
‘ತನಿಖೆಯ ನೆಪದಲ್ಲಿ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂಬ ಮಧ್ಯಂತರ ಆದೇಶವು ಕೇವಲ ಅರ್ಜಿದಾರ ಚಂದ್ರುಗೆ ಮಾತ್ರ ಅನ್ವಯಿಸಲಿದೆ. ಉಳಿದ ಆರೋಪಿಗಳು ತನಿಖೆಗೆ ಸಹಕರಿಸಬೇಕು’ ಎಂದು ತಿಳಿಸಿರುವ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟಂಬರ್ 2ಕ್ಕೆ ಮುಂದೂಡಿದೆ.
ಅರ್ಜಿದಾರ ಯುವಕನ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.






