ಖಾಸಗಿ ಆಸ್ಪತ್ರೆಗಳಲ್ಲಿ ಔಷಧ, ಉಪಕರಣಗಳ ಮೂಲ ದರ ಪ್ರಕಟಣೆ ಕಡ್ಡಾಯ; ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು : ಔಷಧ, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ ಮೂಲ ದರವನ್ನು ಬಹಿರಂಗವಾಗಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿರುವ ಸರಕಾರದ ಕ್ರಮ ಪ್ರಶ್ನಿಸಿ ಖಾಸಗಿ ಆಸ್ಪತ್ರೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.
ಖಾಸಗಿ ಆಸ್ಪತ್ರೆಗಳ ಪರವಾಗಿ ಡಾ. ಶೋಭಾ ಪ್ರಕಾಶ್, ಡಾ. ಹಾಲಗೆರೆ ಮಲ್ಲಿಕಾರ್ಜುನ ಪ್ರಸನ್ನ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಸರಕಾರದ ಪರ ವಕೀಲರು, ಸುತ್ತೋಲೆಯನ್ನು ಸರಕಾರದ ಮಟ್ಟದಲ್ಲಿ ಪರಿಶೀಲಿಸುವ ಸಾಧ್ಯತೆಯಿದೆ. ಆದ್ದರಿಂದ, ಒಂದು ದಿನದ ಮಟ್ಟಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಸರಕಾರದ ನಿಲುವು ತಿಳಿಸುವಂತೆ ಹೆಚ್ಚುವರಿ ಸರಕಾರಿ ವಕೀಲರಿಗೆ ಸೂಚಿಸಿತಲ್ಲದೆ, ಸರಕಾರದ ನಿಲುವು ತಿಳಿಸಿದ ಬಳಿಕ ಸುತ್ತೋಲೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಪರಿಗಣಿಸಲಾಗುವುದು ಎಂದು ಹೇಳಿತು.
ಜತೆಗೆ, ಅರ್ಜಿ ಸಂಬಂಧ ರಾಜ್ಯ ಸರಕಾರ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು, ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ (ಅಕ್ಟೋಬರ್ 30) ಮುಂದೂಡಿತು.
ಪ್ರಕರಣವೇನು?
ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ನವೆಂಬರ್ 1ರಿಂದ ಜಾರಿಯಾಗುವಂತೆ ಔಷಧಗಳು, ವೈದ್ಯಕೀಯ ಉಪಕರಣಗಳು ಮತ್ತು ಬಳಕೆಯ ವಸ್ತುಗಳ 'ಲ್ಯಾಂಡಿಂಗ್ ಬೇಸ್ ಪ್ರೈಸ್' (ಆಮದು/ಖರೀದಿ ಮೂಲ ಬೆಲೆ) ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತರು ಅಕ್ಟೋಬರ್ 1ರಂದು ಹೊರಡಿಸಿರುವ ಸುತ್ತೋಲೆಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.






