ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ನಿಗದಿಗೆ ಸಮಿತಿ ರಚನೆ; ಹೈಕೋರ್ಟ್ಗೆ ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಅವಧಿ ಪೂರ್ಣಗೊಂಡು ಚುನಾವಣೆ ನಡೆಯಬೇಕಿರುವ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾರ್ಡ್ವಾರು ಮೀಸಲಾತಿ ನಿಗದಿಗೆ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಇತರ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ, ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿಗಳಿಗೆ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಲು ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ 2026ರ ಅಕ್ಟೋಬರ್ 3ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ಸಮಿತಿಯಲ್ಲಿ ಸಮಾಜ ಕಲ್ಯಾಣ, ಕಾನೂನು, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು, ಪೌರಾಡಳಿತ ನಿರ್ದೇಶಕರು ಇದ್ದಾರೆ. ವಾರ್ಡ್ವಾರು ಮೀಸಲು ನಿಗದಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಈ ಅಂಶವನ್ನು ನ್ಯಾಯಾಲಯ ದಾಖಲಿಸಿಕೊಂಡು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಸರ್ಕಾರ ಮತ್ತೆ ಕಾಲಾವಕಾಶ ಕೋರಿದ್ದಕ್ಕೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲೆ ವೈಶಾಲಿ ಹೆಗಡೆ ಅವರು ಆಕ್ಷೇಪ ವ್ಯಕ್ತಪಡಿಸಿದರು. ಅಂತಿಮವಾಗಿ, ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತು.






