ಆತ್ಮಹತ್ಯೆಗೆ ಪ್ರಚೋದನೆ ಆರೋಪ | ಬಿಜೆಪಿ ಸಂಸದ ಕೆ.ಸುಧಾಕರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬಾಬು /ಕೆ.ಸುಧಾಕರ್
ಬೆಂಗಳೂರು : ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು ಎಂಬಾತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಇದೇ ವೇಳೆ, ಪ್ರಕರಣದ ತನಿಖೆಗೆ ಸಹಕರಿಸುವಂತೆ ಡಾ. ಕೆ. ಸುಧಾಕರ್ ಅವರಿಗೆ ನ್ಯಾಯಾಲಯ ನಿರ್ದೇಶಿಸಿದೆ.
ಮೃತ ಬಾಬು ಪತ್ನಿ ದಾಖಲಿಸಿರುವ ದೂರು ಆಧರಿಸಿ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಕೋರಿ ಸಂಸದ ಕೆ. ಸುಧಾಕರ್ ಸಲ್ಲಿಸಿದ್ದ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಮಧ್ಯಂತರ ಆದೇಶ ಮಾಡಿತು.
ಜತೆಗೆ, ಅರ್ಜಿ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ, ಎರಡನೇ ಪ್ರತಿವಾದಿಯಾದ ದೂರುದಾರೆ ಶಿಲ್ಪಾ (ಮೃತನ ಪತ್ನಿ) ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.





