ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ: ಕೆಎಸ್ಸಿಎ ಅಧಿಕಾರಿಗಳಿಗೆ ಹೈಕೋರ್ಟ್ ರಿಲೀಫ್
ಆರ್ಸಿಬಿ ಮಾರ್ಕೆಟಿಂಗ್ ಹೆಡ್ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ; ಜೂ.9ಕ್ಕೆ ಮುಂದೂಡಿಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ವಿಚಾರ ಸಂಬಂಧ ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ, ಹೈಕೋರ್ಟ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಅಧಿಕಾರಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಎಫ್ಐಆರ್ ರದ್ದು ಕೋರಿ ಕೆಎಸ್ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಮಧ್ಯಂತರ ಆದೇಶ ನೀಡಿದೆ.
ಜೂ.9 ವಿಚಾರಣೆ ಮುಂದೂಡಿಕೆ :
ಮತ್ತೊಂದೆಡೆ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಅವರ ಬಂಧನ ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜೂ.9 ವಿಚಾರಣೆ ಮುಂದೂಡಿದೆ. ಹೀಗಾಗಿ ನಿಖಿಲ್ ಸೋಸಲೆಗೆ ಸದ್ಯ ಯಾವುದೇ ರಿಲೀಫ್ ಸಿಕ್ಕಿಲ್ಲ.
ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿಖಿಲ್ ಸೋಸಲೆ ಅವರನ್ನು ಬಂಧಿಸಲಾಗಿದ್ದು, ಇದನ್ನು ಪ್ರಶ್ನಿಸಿ ನಿಖಿಲ್ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿ ಸಲ್ಲಿಸಿದ್ದರು. ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.







