ಗಡಿಪಾರು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್, ಮಧ್ಯಂತರ ಆದೇಶ ವಿಸ್ತರಣೆ

ಮಹೇಶ್ ಶೆಟ್ಟಿ ತಿಮರೋಡಿ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಇದೇ ವೇಳೆ, ತಿಮರೋಡಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದಿನ ಆದೇಶದ ವರೆಗೆ ವಿಸ್ತರಿಸಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಮಹೇಶ್ ಶೆಟ್ಟಿ ತಿಮರೋಡಿ ಪರ ಹಿರಿಯ ವಕೀಲ ತಾರಾನಾಥ್ ಪೂಜಾರಿ ಹಾಗೂ ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಆತುರದ ಕ್ರಮ ಜರುಗಿಸದಂತೆ ಈ ಹಿಂದೆ ನೀಡಿರುವ ಮಧ್ಯಂತರ ಆದೇಶ ವಿಸ್ತರಿಸಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಮಧ್ಯಂತರ ಆದೇಶವನ್ನು ನ್ಯಾಯಾಲಯದ ಮುಂದಿನ ಆದೇಶದವರೆಗೆ ವಿಸ್ತಿರಿಸಿತು.







