ಸೆ.16ರ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಅಂತಿಮ ನಿರ್ಣಯ : ಎಚ್.ಕೆ.ಪಾಟೀಲ್

ಬೆಂಗಳೂರು, ಸೆ.11: ಕೃಷ್ಣಾ ಮೇಲ್ದಂಡೆ ಯೋಜನೆ 3ನೆ ಹಂತದ ಕಾಮಗಾರಿಗಳ ಜಮೀನಿಗೆ ಪರಿಹಾರ ಮತ್ತು ಭೂಸ್ವಾಧೀನ ಕೈಗೊಳ್ಳುವ ಸಂಬಂಧ ಸೆ.16ರಂದು ರಾಜ್ಯ ಸರಕಾರ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ಸೆ.16ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಇಂದು ನಡೆದ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ತೀರ್ಪು ರಚಿಸಲು ಏಕರೂಪದ ದರ ನಿಗದಿಪಡಿಸಲು ಹಾಗೂ ಇನ್ನಿತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆದಿದೆ ಎಂದು ಅವರು ಉಲ್ಲೇಖಿಸಿದರು.
ಸಂಪುಟ ಉಪಸಮಿತಿ: ವಿವಿಧ ಇಲಾಖೆಗಳಲ್ಲಿ ಮತ್ತು ನಿಗಮ, ಮಂಡಳಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಮತ್ತು ಇತರ ಎಲ್ಲ ಸೌಲಭ್ಯಗಳನ್ನು ಒದಗಿಸುವ ಕುರಿತು ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಸಂಪುಟಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟದ ಉಪಸಮಿತಿಯೊಂದನ್ನು ರಚಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದ ಎಲ್ಲ ಕಾರ್ಮಿಕರ ಹಿತದೃಷ್ಟಿಯಿಂದ ವಿವಿಧ ಇಲಾಖೆಗಳು ಮತ್ತು ಇಲಾಖೆಗಳ ಅಧಿನದಲ್ಲಿರುವ ನಿಗಮ-ಮಂಡಳಿಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಗಳ ಬಗ್ಗೆ ಸೂಕ್ತ ನಿರ್ಣಯ ಸಚಿವ ಸಂಪುಟದ ಉಪಸಮಿತಿ ಕೈಗೊಳ್ಳಲಿದೆ. ಹೊರಗುತ್ತಿಗೆ ನೌಕರರು ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲು ಹಾಗೂ ಅಪಾಯಕಾರಿ ಸೇವೆ ಸಲ್ಲಿಸುವ ನೌಕರರ ಹಿತರಕ್ಷಣೆ ಮಾಡುವ ದೃಷ್ಟಿಯಿಂದ ಸಚಿವ ಸಂಪುಟ ಉಪಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಅದೇ ರೀತಿ, ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ-2025ಕ್ಕೆ ಅನುಮೋದನೆ ನೀಡಲು, ಸಾರ್ವಜನಿಕ ಸರಕಾರಿ ಕಾರ್ಯಕ್ರಮಗಳಲ್ಲಿ ಆಹ್ವಾನಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರು ಸೇರಿದಂತೆ ವಿವಿಧ ಶಿಷ್ಟಾಚಾರದ ಬಗ್ಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಅವರು ತಿಳಿಸಿದರು.
ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 1000 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್‍ಗಳಿಗೆ ಅವಶ್ಯವಿರುವ ಉಪಕರಣಗಳು, ಪೀಠೋಪಕರಣಗಳನ್ನು 20.5 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದ ಅವರು, ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ಸಜ್ಜೆಪಾಳ್ಯ ಗ್ರಾಮದಲ್ಲಿರುವ 5 ಎಕರೆ ಜಮೀನಲ್ಲಿ "ಶ್ರೀ ಮಹರ್ಷಿ ವಾಲ್ಮೀಕಿ ಸೌಧ” ನಿರ್ಮಾಣ ಮಾಡಲು ಸಚಿವ ಸಂಪುಟ ಒಪ್ಪಿದೆ ಎಂದರು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬೈರಮಂಗಲ ಕೆರೆಯ ದಡದಲ್ಲಿ 100 ದಶಲಕ್ಷ ಲೀಟರ್ ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಶುದ್ದೀಕರಣ ಘಟಕ ಹಾಗೂ 25 ದಶಲಕ್ಷ ಲೀಟರ್ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ ಮತ್ತು ಈ ಘಟಕಗಳ 7 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಒಟ್ಟು 391.82 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.
ಮಂಗಳೂರಿನ ವೆನ್ಹಾಕ್ ಸೇರಿ ಹಲವು ಆಸ್ಪತ್ರೆಗಳ ನವೀಕರಣ: ಮಂಗಳೂರಿನ ವೆನ್ಹಾಕ್ ಆಸ್ಪತ್ರೆ, ಮಾಲೂರು, ಕೊರಟಗೆರೆ, ಮಾಗಡಿ, ಕುಶಾಲನಗರ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳ ನವೀಕರಣ ಕಾಮಗಾರಿಗಳನ್ನು ಒಟ್ಟು 542 ಕೋಟಿ ರೂ., ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಸಚಿವ ಸಂಪುಟ ಅನುಮೋದಿಸಿದೆ.
ಸಚಿವ ಸಂಪುಟದ ಪ್ರಮುಖ ನಿರ್ಣಯ :
► ಸೆ.15ರಂದು ಕರ್ನಾಟಕ ರಾಜ್ಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲು ಸಚಿವ ಸಂಪುಟ ನಿರ್ಣಯ
► ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದ ಬಳಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪನೆ
► ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳ 149 ಕಾಮಗಾರಿಗಳನ್ನು ಒಟ್ಟು 183 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ತೀರ್ಮಾನ
► ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು-2025ಕ್ಕೆ ಅನುಮೋದನೆ
► ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) (ತಿದ್ದುಪಡಿ) ಆದೇಶ-2025ಕ್ಕೆ ಅನುಮೋದನೆ
► 11 ಅರಣ್ಯ, ಅರಣ್ಯಾಧಾರಿತ, ಸೂಕ್ಷ್ಮ ಸಮುದಾಯದ ವಸತಿ ರಹಿತ 6,856 ಕುಟುಂಬಗಳಿಗೆ 4.50 ಲಕ್ಷ ಘಟಕ ವೆಚ್ಚದಲ್ಲಿ (ಸೋಲಿಗ, ಹಸಲರು, ಗೌಡಲು, ಸಿದ್ಧಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಬೆಟ್ಟ, ಕುರುಬ, ಯರವ, ಪಣಿಯನ್ ಇತ್ಯಾದಿ) ಒಟ್ಟು 160 ಕೋಟಿಗಳ ಅಂದಾಜು ಮೊತ್ತದಲ್ಲಿ ಮನೆಗಳನ್ನು ನಿರ್ಮಾಣ ಮಾಡಲು "ಮುಖ್ಯಮಂತ್ರಿಗಳ ಆದಿವಾಸಿ ಗೃಹ ಭಾಗ್ಯ ಯೋಜನೆ" ಜಾರಿಗೆ ಅನುಮೋದನೆ
► ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಎಲ್ಲ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆ ವಿಸ್ತರಿಸಲು ಸಚಿವ ಸಂಪುಟ ಒಪ್ಪಿಗೆ.







