IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಜ್ಞಾನೇಂದ್ರ ಕುಮಾರ್
ಬೆಂಗಳೂರು : IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಗರದ ಕೆಂಪೇಗೌಡ ಏರ್ಪೋರ್ಟ್ಗೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ದಿಲ್ಲಿಗೆ ತೆರಳುವುದಾಗಿ ತಿಳಿಸಿ ಏರ್ಪೋರ್ಟ್ಗೆ ಹೋಗಿದ್ದರೂ, ಅಲ್ಲಿಂದ ಅವರು ವಿಮಾನ ಏರಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.
ಅಧಿಕಾರಿ ನಾಪತ್ತೆಯಾಗಿರುವ ಬಗ್ಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಯ ಚಲನವಲನದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ನಾಪತ್ತೆ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿರುವ ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.
ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ ಕೆಪಿಎಸ್ಸಿಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದೆ.
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಸದ್ಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.






