ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅದಿರು ಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾದ ಶಾಸಕ ಸತೀಶ್ ಸೈಲ್ ಅವರಿಗೆ ಯಕೃತ್ ಕಸಿ ಮಾಡುವ ಅಗತ್ಯವಿದೆ ಎಂಬ ವರದಿಯ ಆಧಾರದಲ್ಲಿ ಹೈಕೋರ್ಟ್ ಗುರುವಾರ ವೈದ್ಯಕೀಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪ್ರಕರಣದ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಜಾಮೀನುರಹಿತ ಬಂಧನ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದ ಹಾಗೂ ಜಾರಿ ನಿರ್ದೇಶನಾಲಯ (ಈಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ರದ್ದುಪಡಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿತು.
ಅರ್ಜಿದಾರರನ್ನು ಹಲವು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಯಕೃತ್ ಸಮಸ್ಯೆ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ಸೈಲ್ ಅನುಭವಿಸುತ್ತಿದ್ದಾರೆ. ಅವರಿಗೆ ಯಕೃತ್ ಕಸಿ (ಲಿವರ್ ಟ್ರಾನ್ಸ್‌ಪ್ಲಾಂಟ್) ಮಾಡಬೇಕಿದೆ ಎಂದು ತಿಳಿಸಿ ನ್ಯಾಯಾಲಯಕ್ಕೆ ವರದಿ ಹಾಗೂ ದಾಖಲೆ ಸಲ್ಲಿಸಿದ್ದಾರೆ. ಅರ್ಜಿದಾರರು ಕಾರಾಗೃಹದಲ್ಲಿದ್ದುಕೊಂಡು, ಲಿವರ್ ಕಸಿಗೆ ಒಳಗಾಗಿ ನಂತರ ಕಾಲಕಾಲಕ್ಕೆ ಚಿಕಿತ್ಸೆ ಪಡೆಯುವುದು ಕಷ್ಟವಾಗಲಿದೆ. ಆದ್ದರಿಂದ, ಸೈಲ್‌ಗೆ ಷರತ್ತುಬದ್ಧ ವೈದ್ಯಕೀಯ ಜಾಮೀನು ಮಂಜೂರು ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಆದೇಶಿಸಿದೆ.
ಇದೇ ವೇಳೆ, ಸತೀಶ್ ಸೈಲ್ ಅವರು 5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ವೈದ್ಯಕೀಯ ಸ್ಥಿತಿಗತಿ ಕುರಿತು 8 ವಾರಕ್ಕೊಮ್ಮೆ ನ್ಯಾಯಾಲಯಕ್ಕೆ ತಿಳಿಸಬೇಕು. ಲಿವರ್ ಕಸಿ ಬಗ್ಗೆ 2 ವಾರದಲ್ಲಿ ಮಾಹಿತಿ ನೀಡಬೇಕು. ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಅಡ್ಡಿಪಡಿಸುವಂತಹ ಯಾವುದೇ ಕೃತ್ಯದಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ನ್ಯಾಯಾಲಯದ ಈ ಆದೇಶ ಪ್ರತಿ ಲಭ್ಯವಾಗುವವರೆಗೆ ಅರ್ಜಿದಾರರಿಗೆ ಈಗಾಗಲೇ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ವೈದ್ಯಕೀಯ ಜಾಮೀನು ಮುಂದುವರಿಯಲಿದೆ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.






