ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಬಹುತೇಕ ಪೂರ್ಣಗೊಂಡಿದೆ. ಹೈಕಮಾಂಡ್‌ನೊಂದಿಗೆ ನಡೆದ ಸರಣಿ ಸಭೆಗಳ ನಂತರ ನೂತನ ಸಚಿವರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಸಚಿವ ಸ್ಥಾನ ಸಿಗಲಿಲ್ಲವೆಂದು ಅಸಮಾಧಾನಗೊಂಡು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಚಿವ ಸ್ಥಾನ ವಂಚಿತ ಯಶವಂತರಾಯಗೌಡ ಪಾಟೀಲ್ ಅವರು ಹಂಗಾಮಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಸಲ್ಲಿಸಿ, ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ ಎನ್ನಲಾಗಿದೆ.
ನಾಳೆಯೇ ಬೇಳೂರು ಗೋಪಾಲಕೃಷ್ಣ ರಾಜೀನಾಮೆ?
ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಆಗಸ್ಟ್ 4 ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನನಗೆ ಸಾಕಷ್ಟು ನೋವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮತ್ತು ಪ್ರಭಾವಿ ನಾಯಕರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.






