ಅನ್ನಭಾಗ್ಯ ಯೋಜನೆಯಡಿ ‘ಇಂದಿರಾ ಆಹಾರ ಕಿಟ್’ಗಳ ವಿತರಣೆ : ಸಂಪುಟ ನಿರ್ಧಾರ

ಬೆಂಗಳೂರು, ಅ.9: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ʼಇಂದಿರಾ ಆಹಾರ ಕಿಟ್ʼ(ಪೌಷ್ಠಿಕ ಆಹಾರ ಕಿಟ್) ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.
ಇಂದಿರಾ ಆಹಾರ ಕಿಟ್‍ನಲ್ಲಿ 2 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.







