ರಾಜ್ಯಾದ್ಯಂತ 16,951 ಕಡೆಗಳಲ್ಲಿ ಪರಿಶೀಲನೆ; 800 ಬಾಲಕಾರ್ಮಿಕರ ರಕ್ಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೂಚನೆ ಮೇರೆಗೆ ಪೊಲೀಸರು ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ, ಮಾರುಕಟ್ಟೆ, ಅಂಗಡಿ, ಹೋಟೆಲ್ ಸೇರಿದಂತೆ ಸುಮಾರು 16,951ಕ್ಕೂ ಅಧಿಕ ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, ಒಟ್ಟು 800 ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಯಶವಂತಪುರ ಎಪಿಎಂಸಿ ಯಾರ್ಡ್ಗೆ ದಿಢೀರ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಾರ್ಮಿಕರು ಪತ್ತೆ ಆಗಿದ್ದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಅದರ ಬೆನ್ನಲ್ಲೇ ರಾಜ್ಯಾದ್ಯಂತ ಬಾಲಕಾರ್ಮಿಕರ ಪತ್ತೆ ಕಾರ್ಯಾಚರಣೆ ನಡೆಸುವಂತೆ ಸಿಎಂ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡಿದ್ದರು. ಅದರಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಬಾಲ ಕಾರ್ಮಿಕರನ್ನು ವಿಮುಕ್ತಿಗೊಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ 5,897 ಕಡೆಗಳಲ್ಲಿ ಪರಿಶೀಲನೆ ನಡೆಸಿ, 503 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. 18 ಮಾಲಕರ ವಿರುದ್ಧ ಕ್ರಮ ಜರುಗಿಸಲಾಗಿದೆ. ಮೈಸೂರು ನಗರದಲ್ಲಿ 13 ಬಾಲಕಾರ್ಮಿಕರನ್ನು, ಹುಬ್ಬಳ್ಳಿ-ದಾರವಾಢ ನಗರಗಳಲ್ಲಿ 10, ಮಂಗಳೂರು 3 ಕಲಬುರಗಿ 22 ಬಾಲ ಕಾರ್ಮಿಕರನ್ನು ವಿಮುಕ್ತಿಗೊಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 188 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ, ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. 2 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ವಿಜಯಪುರದಲ್ಲಿ 1,156 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ, 72 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. 3 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಹೀಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ 800 ಮಂದಿ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






