ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭ : ಕೆ.ವೆಂಕಟೇಶ್

ಬೆಂಗಳೂರು : ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಉಳಿದಿರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.
ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಮೆಂಟ್ ಮಂಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 400 ಪಶು ವೈದ್ಯಾಧಿಕಾರಿಗಳ ಖಾಯಂ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಸಕಲೇಶಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರು ಮತ್ತು ಸಿಬ್ಬಂದಿ ವರ್ಗದ ಹುದ್ದೆಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿರುವುದರಿಂದಲೇ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಹಾಗೂ 300 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿತ್ತು. ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿ ಇರುವುದಾಗಿ ಅವರು ಉಲ್ಲೇಖಿಸಿದರು.
ಹುದ್ದೆಗಳ ಕೊರತೆ ಇದ್ದರೂ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಲಭ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಧಿಕ ಪ್ರಭಾರದಲ್ಲಿರಿಸಿ, ರೈತರ ಜಾನುವಾರುಗಳಿಗೆ ಸಂಚಾರಿ ಪಶುಚಿಕಿತ್ಸಾಲಯ ವಾಹನದ (1962 ಸಹಾಯವಾಣಿ) ಸೌಲಭ್ಯದೊಂದಿಗೆ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ವಿಳಂಬವಾಗದಂತೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.







