ಲಿಂಗಾಯತ ಮಠಾಧಿಪತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕಾಡಸಿದ್ದೇಶ್ವರ ಸ್ವಾಮೀಜಿಗೆ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದ ಕೋರ್ಟ್

ಕಾಡಸಿದ್ದೇಶ್ವರ ಸ್ವಾಮೀಜಿ
ಬೆಂಗಳೂರು : ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಬಗ್ಗೆ ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡದಂತೆ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ನಿರ್ಬಂಧಿಸಿ, ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ.
ಬೀದರ್ ಜಿಲ್ಲೆ ಬಸವಕಲ್ಯಾಣದ ಅನುಭವ ಮಂಟಪದ 'ಲಿಂಗಾಯತ ಮಠಾಧಿಪತಿಗಳ ಒಕ್ಕೂಟ'ದ ಪರವಾಗಿ ಅದರ ಕಾರ್ಯದರ್ಶಿ ಶಿವಾನಂದ ಸ್ವಾಮೀಜಿ ಹಾಗೂ ಸಿದ್ದಲಿಂಗಯ್ಯ ಚಂದ್ರಶೇಖರಯ್ಯ ಹಿರೇಮಠ ಸ್ವಾಮೀಜಿ ಸಲ್ಲಿಸಿದ್ದ ಅಸಲು ದಾವೆಯನ್ನು ಶುಕ್ರವಾರ ವಿಚಾರಣೆ ನಡೆಸಿದ ಬೆಂಗಳೂರಿನ 30ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಮಧು ಎನ್. ಆರ್. ಅವರು ಈ ಮಧ್ಯಂತರ ಆದೇಶ ಮಾಡಿದ್ದಾರೆ.
ಅರ್ಜಿಯ ಮುಂದಿನ ವಿಚಾರಣೆವರೆಗೆ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಸಾರ್ವಜನಿಕವಾಗಿ ಹಾಗೂ ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಮಾನಹಾನಿಕರ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದಂತೆ ಕಾಡಸಿದ್ದೇಶ್ವರ ಸ್ವಾಮಿಗಳನ್ನು ನಿರ್ಬಂಧಿಸಿ ತಾತ್ಕಾಲಿಕ ಪ್ರತಿಬಂಧಕಾದೇಶ ನೀಡಿರುವ ನ್ಯಾಯಾಲಯ, ಅರ್ಜಿ ಸಂಬಂಧ ಕಾಡಸಿದ್ದೇಶ್ವರ ಸ್ವಾಮೀಜಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.
ಮನವಿ ಏನು?
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮತ್ತದರ ಸದಸ್ಯರ ವಿರುದ್ಧ ಸಾರ್ವಜನಿಕವಾಗಿ ಅಥವಾ ಯಾವುದೇ ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಶಾಶ್ವತ ಪ್ರತಿಬಂಧಕಾದೇಶ ವಿಧಿಸಬೇಕು ಹಾಗೂ ಒಕ್ಕೂಟ ಮತ್ತದರ ಸದಸ್ಯರ ಪ್ರತಿಷ್ಠೆಗೆ ಧಕ್ಕೆ ತಂದು, ನೋವು ಉಂಟು ಮಾಡಿದ್ದಕ್ಕಾಗಿ 1 ಕೋಟಿ ರೂ. ಪರಿಹಾರ ಪಾವತಿಸಲು ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಪ್ರಕರಣವೇನು?
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಅವರು ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಬೀಳೂರು ಗ್ರಾಮದ ಸಮಾರಂಭವೊಂದರಲ್ಲಿ ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರನ್ನು ಡಿಸೆಂಬರ್ 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂದಿಸಿ ವಿಜಯಪುರ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಕಲಬುರಗಿ ಪೀಠ ಅಕ್ಟೋಬರ್ 17ರಂದು ವಜಾಗೊಳಿಸಿತ್ತು. ಇದೀಗ, ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಕೋರ್ಟ್ ಮೆಟ್ಟಿಲೇರಿದೆ.







