ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಜೂ.14ರ ವರೆಗೆ ಮಳೆ ಸಾಧ್ಯತೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.9ರಿಂದ ಜೂ.14ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ನಿರಂತರ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ಈ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.
ಜೂ.9ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂ.10ರಿಂದ ಜೂ.14ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬಳ್ಳಾರಿ, ವಿಜಯನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಹೇಳಿದೆ.






