ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಪ್ರವಾಹವಾಗುವ ಸಾಧ್ಯತೆ : ಕಾವೇರಿ ನೀರಾವರಿ ನಿಗಮ ನಿಯಮಿತ ಎಚ್ಚರಿಕೆ

ಬೆಂಗಳೂರು, ಅ.23: ಕೃಷ್ಣರಾಜಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಪ್ರವಾಹವಾಗುವ ಸಾಧ್ಯತೆ ಇದೆ ಎಂದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಎಚ್ಚರಿಕೆ ನೀಡಿದೆ.
ಗುರುವಾರ ನಿಯಮಿತದ ಕಾರ್ಯಪಾಲಕ ಅಭಿಯಂತರರು ಪ್ರಕಟನೆ ಹೊರಡಿಸಿದ್ದು, ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದೆ. ಹೀಗಾಗಿ ಕೃಷ್ಣರಾಜಸಾಗರ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್ ನಿಂದ 40 ಸಾವಿರ ಕ್ಯೂಸೆಕ್ಸ್ ವರೆಗೆ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ ಎಂದಿದ್ದಾರೆ.
ಇದರಿಂದ ಕಾವೇರಿ ನದಿ ನೀರಿನ ಪ್ರಮಾಣ ಹೆಚ್ಚಾಗುವ ಸಂಭವವಿದೆ. ಆದುದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿಗೆ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗೃತ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಬೇಕು ಎಂದು ಅವರು ಹೇಳಿದ್ದಾರೆ.





