ಕೆಆರ್‌ಎಸ್ ಬಳಿ ಡಿಸ್ನಿಲ್ಯಾಂಡ್ ಮಾದರಿ ಮನೋರಂಜನೆ ಪಾರ್ಕ್ ಕಾಮಗಾರಿ ವಿಚಾರ : ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ʼಕಾವೇರಿ ಆರತಿʼಗೆ ಮೌಖಿಕ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು : ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಆಣೆಕಟ್ಟಿನ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನೋರಂಜನಾ ಪಾರ್ಕ್ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕಾವೇರಿ ಆರತಿಗೆ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿ.ವಿ.ಕಾಮೇಶ್ವರ ರಾವ್, ನ್ಯಾ.ಸಿಎಂ.ಜೋಷಿ ಅವರಿದ್ದ ಪೀಠ ವಿಚಾರಣೆ ನಡೆಸಿ, ರಾಜ್ಯ ಸರಕಾರ, ಕಾವೇರಿ ನೀರಾವರಿ ನಿಗಮ, ಹಾಗೂ ಆಣೆಕಟ್ಟು ಸುರಕ್ಷತಾ ಸಮಿತಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ವೇಳೆ ಆಣೆಕಟ್ಟು ಬಳಿ 120 ಅಡಿಯ ಕಾವೇರಿ ಪ್ರತಿಮೆ ಸ್ಥಾಪಿಸಲಾಗುತ್ತಿದೆ. ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೋ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ಕೋರ್ಟ್‌ಗೆ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನೋರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರಕಾರದ ಪರ ವಾದ ಮಂಡಿಸಿದರು.
ಕಾಮಗಾರಿಗೆ ಅಗೆಯುವುದರಿಂದ ಆಣೆಕಟ್ಟಿಗೆ ಹಾನಿಯಾಗುವುದಿಲ್ಲವೇ? ಆಣೆಕಟ್ಟು ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ?.ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ ?. ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂಬುದರ ಬಗ್ಗೆ 2 ವಾರದಲ್ಲಿ ಪ್ರತಿಕ್ರಿಯಿಸಲು ಸರಕಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್, ನ್ಯಾ.ಸಿ.ಎಂ.ಜೋಷಿ ಅವರಿದ್ದ ಪೀಠ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ʼಕಾವೇರಿ ಆರತಿʼಗೆ ಮೌಖಿಕ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಹೈಕೋರ್ಟ್ :
ವಿಚಾರಣೆ ವೇಳೆ ಸರಕಾರವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಮುಂದಿನ ಎರಡು ವಾರಗಳವರೆಗೆ ಮನೋರಂಜನಾ ಪಾರ್ಕ್ ಮತ್ತು ಕಾವೇರಿ ಆರತಿಗೆ ಸಂಬಂಧಪಟ್ಟಂತೆ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಎಂದು ಹೇಳಿ ತಾತ್ಕಾಲಿಕ ತಡೆಯಾಜ್ಞೆಯನ್ನು ಮೌಖಿಕವಾಗಿ ನೀಡಿದೆ.







