ಸುಳ್ಳು ಸುದ್ದಿ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾಯ್ದೆ ರಚನೆ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅಪಾಯಕಾರಿಯಾಗಿದ್ದು, ಸದ್ಯದಲ್ಲೇ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಾಯ್ದೆಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ವಾರ್ತಾ ಇಲಾಖೆಯ ಸುಲೋಚನಾ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ‘ಪತ್ರಿಕಾ ದಿನಾಚರಣೆ 2025, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ವಿತರಣೆ ಹಾಗೂ ‘ನಿಜ ಸುದ್ದಿಗಾಗಿ ಸಮರ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಸುಳ್ಳು ಸುದ್ದಿಗಳು ಮಾಧ್ಯಮಗಳಲ್ಲಿ ರಾರಾಜಿಸುತ್ತಿವೆ. ಮಾಧ್ಯಮಗಳು ವಸ್ತುಸ್ಥಿತಿಯನ್ನು ಜನರ ಮುಂದೆ ಇಡಬೇಕೇ ಹೊರತು, ಸತ್ಯವನ್ನು ಮರೆಮಾಚುವ ಕೆಲಸ ಮಾಡಬಾರದು. ಮಾಧ್ಯಮಗಳು ಕಾಸಿಗಾಗಿ ಸುದ್ದಿ ಪ್ರಸಾರ, ಸುಳ್ಳು ಸುದ್ದಿಗೆ ಕಡಿವಾಣ ಹಾಕಬೇಕು. ಪತ್ರಿಕಾ ಸ್ವಾತಂತ್ರ್ಯವನ್ನು ಉತ್ತಮವಾಗಿ ಬಳಸಿಕೊಂಡ ಒಟ್ಟು 180 ದೇಶಗಳ ಪೈಕಿ ಭಾರತ 151ನೇ ಸ್ಥಾನದಲ್ಲಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡುವುದಿಲ್ಲ ಎಂದು ಅವರು ಹೇಳಿದರು.
ನಾನು ಇವತ್ತು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಆರೋಗ್ಯ ಸಂಜೀವಿನಿ ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇವೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಜಾರಿ ಮಾಡಿರುವುದಲ್ಲ. ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಿ ಎಂದು ಅವರು ಕರೆ ನೀಡಿದರು.







