ಅಪರಾಧ ಕೃತ್ಯಗಳಲ್ಲಿ ಪೊಲೀಸ್ ಸಿಬ್ಬಂದಿ ಭಾಗಿ: ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ

ಡಾ.ಎಂ.ಎ.ಸಲೀಂ
ಬೆಂಗಳೂರು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ವರ್ತನೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವವರ ಮಾಹಿತಿಯನ್ನು ತಕ್ಷಣವೇ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಕೆಲ ಪೊಲೀಸ್ ಸಿಬ್ಬಂದಿಯೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಅವರು ಪತ್ರದ ಮೂಲಕ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಘಟಕದ ಎಲ್ಲ ಅಧಿಕಾರಿಗಳು ಅಧೀನದ ಪೊಲೀಸ್ ಅಧಿಕಾರಿ/ಸಿಬ್ಬಂದಿಯ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯಮಿತವಾಗಿ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.
ನೈತಿಕ ಮಾನದಂಡಗಳು, ಕಾನೂನುಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಚಾರ/ಅಪರಾಧಗಳ ಗಂಭೀರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಡಾ.ಎಂ.ಎ.ಸಲೀಂ ಹೇಳಿದ್ದಾರೆ.
ಪೊಲೀಸ್ ಇಲಾಖೆಯ ಘನತೆ ಕಾಪಾಡುವ ಹೊಣೆಗಾರಿಕೆ ಮತ್ತು ಸಮಗ್ರತೆಯ ಸಂಸ್ಕೃತಿಯು ಎಲ್ಲಾ ಹಂತದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸಮಾನ ಹೊಣೆಗಾರಿಕೆಯಾಗಿದೆ ಎಂದು ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಮನೋಬಲ ಕುಗ್ಗುವಿಕೆಯನ್ನು ಮತ್ತು ಇತರ ನೈತಿಕ ಲೋಪದೋಷಗಳಿಗೆ ಕಾರಣವಾಗುವ ಅಂಶಗಳಿಗೆ ಸೂಕ್ತವಾಗಿ ಮತ್ತು ಸೂಕ್ಷ್ಮವಾಗಿ ಸ್ಪಂದಿಸಿ, ಪರಿಹರಿಸಲು ಅಗತ್ಯ ಮಾರ್ಗದರ್ಶನ ಮತ್ತು ಸಲಹಾ ಕಾರ್ಯಕ್ರಮಗಳನ್ನು ಉತ್ತೇಜಿಸಬೇಕು ಎಂದು ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ.
ಪ್ರಸ್ತುತ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಮತ್ತು ಈ ಸಂಹಿತೆಯು ಅಡ್ಡದಾರಿಗಳಿಗೆ ಆಸ್ಪದವಾಗದಂತೆ ಕ್ರಮ ವಹಿಸಬೇಕು ಎಂದು ಡಾ.ಎಂ.ಎ.ಸಲೀಂ ಹೇಳಿದ್ದಾರೆ.
ರಾಜ್ಯದ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳು ಹಾಗೂ ಅಧೀನದ ಪೊಲೀಸ್ ಅಧಿಕಾರಿ/ಸಿಬ್ಬಂದಿಯು ಕಾನೂನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಎಲ್ಲಾ ನಿಯಮಗಳನ್ನು ಆಯಾ ವಿಭಾಗವಾರು ಅಧಿಕಾರಿಗಳು ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ. ಪೊಲೀಸ್ ಇಲಾಖೆಯ ಘನತೆ, ಗೌರವ ಮತ್ತು ಸಮಗ್ರತೆಯಲ್ಲಿ ರಾಜಿ ಇಲ್ಲ ಎಂದು ಡಾ.ಎಂ.ಎ.ಸಲೀಂ ಪತ್ರದ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.







