ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ತಾಲೂಕಿಗೆ ಗಡಿಪಾರು; ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಗಡಿಪಾರು ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿ, ಮೇಲ್ಮನವಿ ವಜಾಗೊಳಿಸಿ ಆದೇಶಿಸಿತು.
ಇದೇ ವೇಳೆ ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸುವವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಆದರೆ, ಈ ಮನವಿಯನ್ನು ವಿಭಾಗೀಯ ನ್ಯಾಯಪೀಠ ತಳ್ಳಿಹಾಕಿತು.
ಪ್ರಕರಣದ ಹಿನ್ನೆಲೆ:
ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು (ಮೂರನೇ ಬಾರಿ) ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಆಲಿಸಿದ್ದ ಏಕಸದಸ್ಯ ನ್ಯಾಯಪೀಠ, ಉಪ ವಿಭಾಗಾಧಿಕಾರಿಗಳ ಆದೇಶ ಪ್ರಶ್ನಿಸಿ ರಾಜ್ಯ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ. ಆದ್ದರಿಂದ, ಅರ್ಜಿ ವಿಚಾರಣೆಗೆ ಊರ್ಜಿತವಾಗುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತ್ತಲ್ಲದೆ, ಅರ್ಜಿದಾರರು ಗೃಹ ಕಾರ್ಯದರ್ಶಿಗಳ ಮುಂದೆ ಮೇಲ್ಮನವಿ ಸಲ್ಲಿಸುವ ಸಲುವಾಗಿ ಮುಂದಿನ 2 ವಾರಗಳ ಕಾಲ ಗಡಿಪಾರು ಸಂಬಂಧ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಈ ಆದೇಶದಂತೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವ ಬದಲು ತಿಮರೋಡಿ ಏಕಸದಸ್ಯ ನ್ಯಾಯಪೀಠದ ಆದೇಶವನ್ನೇ ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.






