ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ (PTI)
ಬೆಂಗಳೂರು : ‘ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರವು ಪಕ್ಷದ ಹೈಕಮಾಂಡ್ ಕೈಯಲ್ಲಿದೆ’ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಯಾರು ಹೇಳಲು ಆಗುವುದಿಲ್ಲ. ಮುಂದಿನ ಕ್ರಮ ಕೈಗೊಳ್ಳುವ ಅಧಿಕಾರ ಹೈಕಮಾಂಡ್ಗಿದೆ. ಯಾರು ಕೂಡ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿ ಮಾಡಬಾರದು ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಬಂದಿದ್ದಾರೆ. ಶಾಸಕರ ಅಹವಾಲುಗಳನ್ನು ಆಲಿಸುತ್ತಾರೆ. ಶಾಸಕರು ತಮ್ಮ ಸಮಸ್ಯೆಗಳನ್ನು ಅವರ ಬಳಿ ಹೇಳಲಿದ್ದಾರೆ. ಆನಂತರ, ಮುಂದೆ ಏನು ಮಾಡಬೇಕು ಎಂಬುದನ್ನು ನೋಡೋಣ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರು ವಿಭಿನ್ನ ಹೇಳಿಕೆಗಳನ್ನು ನೀಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಅವರು ನೀಡುವ ಹೇಳಿಕೆಗಳಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಎಐಸಿಸಿ ಮಟ್ಟದ ಹೇಳಿಕೆಗಳಿಗಷ್ಟೇ ನಾನು ಉತ್ತರಿಸುತ್ತೇನೆ ಎಂದು ಹೇಳಿದರು.
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ಕೈ ಬಿಡಬೇಕು ಎಂದು ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಅವರು ಮ್ಯಾನ್ ಆಫ್ ಮನುಸ್ಮೃತಿ. ಸಮಾಜವಾದ ಮತ್ತು ಜಾತ್ಯತೀತತೆಯನ್ನು ಇಷ್ಟಪಡುವವರಲ್ಲ. ಆರೆಸ್ಸೆಸ್ ಸದಾ ಬಡವರ ವಿರೋಧಿ. ಅವರಿಗೆ ಅಷ್ಟೊಂದು ಆಸಕ್ತಿ ಇದ್ದರೆ ಸಮಾಜದಲ್ಲಿರುವ ಅಸಮಾನತೆಯನ್ನು ನಿರ್ಮೂಲನೆ ಮಾಡಬೇಕಿತ್ತು. ಸಂವಿಧಾನದಲ್ಲಿ ಏನಾದರೂ ಬದಲಾವಣೆ ಮಾಡಲು ಮುಂದಾದರೆ ಉಗ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.







