ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ | ‘ಪ್ರವಾಹ’ ಪರಿಹಾರ ನೀಡಲು ಕೋರಿ ಪ್ರಧಾನಿಗೆ ಪತ್ರ : ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ | Photo: PTI
ಬೆಂಗಳೂರು, ಸೆ. 29 : ಬೀದರ್, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಿಂದಾಗಿ ಉಂಟಗಿರುವ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ಹಾನಿಗೆ ಅಗತ್ಯ ಪರಿಹಾರ ಕೋರಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುತ್ತೇನೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಸಚಿವರು ಕಲ್ಯಾಣ ಕರ್ನಾಟಕ ಭಾಗಕ್ಕೆ ನಾಳೆ(ಸೆ.30) ಖುದ್ದು ಭೇಟಿ ನೀಡಲಿದ್ದಾರೆ. ತೊಗರಿ, ಹೆಸರು, ಉದ್ದು ಸೇರಿದಂತೆ ಹಲವು ಬೆಳೆಗಳಿಗೂ ಹಾನಿಯಾಗಿದೆ ಎಂದು ಹೇಳಿದರು.
ಬೆಳೆ ಹಾನಿಯ ಬಗ್ಗೆ ವರದಿ ಬಂದ ಬಳಿಕ ಪರಿಹಾರ ನೀಡುವಂತೆ ಪ್ರಧಾನಿಗೆ ಪತ್ರ ಬರೆಯುತ್ತೇನೆ. ಪ್ರವಾಹದಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಬಳಿಕ ಯಾವ ರೀತಿ ರೈತರಿಗೆ ಸಹಾಯ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ಮಾಡಲಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ನೆರವು ನೀಡಬೇಕು ಎಂದು ಅವರು ತಿಳಿಸಿದರು.





