ಎಸ್ಐಆರ್ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ
ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ : ಅಭಿಜೀತ್ ದೀಪ್ಕೆ

PC : PTI
ಬೆಂಗಳೂರು : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಿಂದ ಉಂಟಾಗಿರುವ ಅನ್ಯಾಯ ಮತ್ತು ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್ಐಆರ್ ವಿರೋಧಿ ಒಕ್ಕೂಟ ಹಾಗೂ ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಇಂದು (ಅ.8) ಜನತಾ ನ್ಯಾಯಾಲಯ ಹಾಗೂ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಹುಭಾಷಾ ನಟ ಪ್ರಕಾಶ್ ರಾಜ್, ಯೂಟ್ಯೂಬರ್ ಧ್ರುವ ರಾಠಿ ಹಾಗೂ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.
SIRನಿಂದ ತೊಂದರೆಗೊಳಗಾದವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ‘ಜನತಾ ನ್ಯಾಯಾಲಯ’ ರೂಪದಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, SIR ಪ್ರಕ್ರಿಯೆ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ, ʼನಾವು ಬೀದಿಗಿಳಿದು ಹೋರಾಡಲಿದ್ದೇವೆ, ನಮ್ಮ ಪ್ರಜಾಪ್ರಭುತ್ವವನ್ನು ಮರಳಿ ಪಡೆಯಲಿದ್ದೇವೆ. ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲʼ ಎಂದು ಹೇಳಿದರು.
ʼಎಸ್ಐಆರ್ ಪರಿಷ್ಕರಣೆಯ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿ ಹಾಕಲಾಗುತ್ತಿದೆʼ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.






