ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ | ನಾಳೆ (ಮೇ 4) ಮತ ಎಣಿಕೆ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯವು ನಾಳೆ (ಮೇ 4) ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟವಾಗಲಿದೆ.
ಎರಡೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಅಭ್ಯರ್ಥಿಗಳು ಸೇರಿದಂತೆ ಘಟಾನುಘಟಿ ನಾಯಕರಲ್ಲಿ ಆತಂಕ ಮನೆ ಮಾಡಿದ್ದು, ಯಾರಿಗೆ ವಿಜಯ ಮಾಲೆ ಸಿಗಲಿದೆ ಎಂಬುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ನಾಳೆ ಬೆಳಗ್ಗೆ 8 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನದೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ಮತ ಎಣಿಕೆಗೆ ಎರಡೂ ಕ್ಷೇತ್ರಗಳಲ್ಲಿಯೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಿಗಿ ಪೊಲೀಸ್ ಕಲ್ಪಿಸಲಾಗಿದೆ.
ಮತ ಎಣಿಕೆ ನಡೆಯುವ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ಕಲಂ-144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅಧಿಕೃತ ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಏಜೆಂಟರು ಸೇರಿದಂತೆ ಚುನಾವಣಾ ಆಯೋಗದ ಅಗತ್ಯ ಪಾಸ್ ಹೊಂದಿರುವವರನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಹಣಾಹಣಿ ಏರ್ಪಟ್ಟಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಅತ್ತ ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ. ದಾವಣಗೆರೆಯ ಡಿಆರ್ಆರ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. 14 ಟೇಬಲ್ಗಳಲ್ಲಿ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ.
ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಮತ ಎಣಿಕೆ ನಾಳೆ (ಮೇ 4) ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಬೆಳಗ್ಗೆ 8ರಿಂದ ನಡೆಯಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತವು ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಸಿಬ್ಬಂದಿಗಳಿಗೆ ಬೆಳಗ್ಗೆ 7 ಗಂಟೆಗೆ ಹಾಜರಿರಲು ತಿಳಿಸಲಾಗಿದೆ. ಭದ್ರತಾ ಕೊಠಡಿಯನ್ನು ಬೆಳಗ್ಗೆ 7 ಗಂಟೆಗೆ ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಏಜೆಂಟರುಗಳ ಸಮ್ಮುಖಮದಲ್ಲಿ ತೆರೆಯಲಾಗುತ್ತದೆ.
ವಿದ್ಯುನ್ಮಾನ ಮತ ಯಂತ್ರಗಳಲ್ಲಿನ ಮತ ಎಣಿಕೆ ಕಾರ್ಯಕ್ಕೆ ನೆಲಮಹಡಿಯ ಕೊಠಡಿ ಸಂಖ್ಯೆ-4ರಲ್ಲಿ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಪತ್ರಗಳ ಎಣಿಕೆಗಾಗಿ ನೆಲಮಹಡಿಯ 9ನೆ ಕೊಠಡಿಯಲ್ಲಿ ಒಂದು ಟೇಬಲ್ ಹಾಗೂ ಇಟಿಪಿಬಿಎಸ್ ಸ್ಕ್ಯಾನಿಂಗ್ಗಾಗಿ ಒಂದು ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ತಲಾ ಒಬ್ಬ ಎಣಿಕೆ ಮೇಲ್ವಿಚಾರಕ, ಎಣಿಕೆ ಸಹಾಯಕ ಹಾಗೂ ಮೈಕ್ರೋ ಅಬ್ಸರ್ವರ್ ಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ ಇರುತ್ತಾರೆ.
ಸೇವಾ ಮತದಾರರಿಂದ ಸ್ವೀಕರಿಸಲ್ಪಡುವ ಅಂಚೆ ಮತಪತ್ರಗಳ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಸಲುವಾಗಿ ಒಂದು ಟೇಬಲ್ ಹಾಕಲಾಗಿದ್ದು, ಒಬ್ಬ ಸ್ಕ್ಯಾನಿಂಗ್ ಮೇಲ್ವಿಚಾರಕ, ಒಬ್ಬ ಅಸಿಸ್ಟಂಟ್, ಇಬ್ಬರು ಸಹಾಯಕ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ. ಎಣಿಕೆ ಕೇಂದ್ರದಲ್ಲಿ ಮೊಬೈಲ್ ನಿಬರ್ಂಧಿಸಲಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿ ಪುತ್ರ ಉಮೇಶ ಮೇಟಿ ಕಾಂಗ್ರೆಸ್ ಪಕ್ಷದಿಂದ ಮತ್ತು ಬಿಜೆಪಿಯಿಂದ ವೀರಣ್ಣ ಚರಂತಿಮಠ ಕಣದಲ್ಲಿದ್ದು, ಯಾರಿಗೆ ಗೆಲುವು ಸಾಧಿಸಲಿದ್ದಾರೆ ಎಂಬುದು ಸೋಮವಾರ ಗೊತ್ತಾಗಲಿದೆ.
ಎ.9ರಂದು ನಡೆದ ಉಪಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ.68.43ರಷ್ಟು ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಶೇ.68.74ರಷ್ಟು ಮಂದಿ ಮತದಾನ ನಡೆದಿತ್ತು. ತೀವ್ರ ಪ್ರತಿಷ್ಠೆ-ಪೈಪೋಟಿ ಸೃಷ್ಟಿಸಿರುವ ಈ ಉಪಚುನಾವಣೆ ಗೆಲುವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಮಂದಿ ಪ್ರಚಾರ ನಡೆಸಿದ್ದರು.
ಇತ್ತ ಪ್ರತಿಪಕ್ಷ ಬಿಜೆಪಿಯ ಅಭ್ಯರ್ಥಿಗಳ ಪರವಾಗಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಬಿಎಸ್ವೈ ಸಹಿತ ಘಟಾನುಘಟಿ ನಾಯಕರು ಪ್ರಚಾರ ಕೈಗೊಂಡಿದ್ದರು. ನಾಳೆ ನಡೆಯಲಿರುವ ಮತ ಎಣಿಕೆ ನಂತರ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.






