ರಾಜ್ಯದ 800 ಸರಕಾರಿ ಶಾಲೆಗಳು ಪಬ್ಲಿಕ್ ಶಾಲೆಗಳಾಗಿ ಪರಿವರ್ತನೆ : ಸಚಿವ ಮಧುಬಂಗಾರಪ್ಪ

ಬೆಂಗಳೂರು, ಅ.15: ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ, ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ, ಏಷ್ಯನ್ ಡೆವೆಲಪ್‍ಮೆಂಟ್ ಬ್ಯಾಂಕ್(ಎಡಿಬಿ) ಸಹಯೋಗದೊಂದಿಗೆ ರಾಜ್ಯ ಸರಕಾರದ ವತಿಯಿಂದ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು ಎಂದರು.
ಜೊತೆಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನಿಧಿಯ ಮೂಲಕ 200 ಶಾಲೆಗಳನ್ನು, ಕರ್ನಾಟಕ ಗಣಿ ಪರಿಸರಪುನಶ್ಚೇತನ ನಿಗಮದ ವತಿಯಿಂದ ಗಣಿ ಬಾಧಿತ 10 ತಾಲೂಕುಗಳಲ್ಲಿ 100 ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಲು ಪ್ರತ್ಯೇಕ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2 ರಿಂದ 3 ಕೆಪಿಎಸ್ ಶಾಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿ 4 ರಿಂದ 5 ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು ಎಂದು ಅವರು ವಿವರಿಸಿದರು.
ಪ್ರಾಥಮಿಕ, ಪ್ರೌಡ ಮತ್ತು ಪಿಯುಸಿ ಎಂದು ನಮ್ಮ ಇಲಾಖೆಯಲ್ಲಿ ವಿಭಾಗಿಸಲಾಗಿದೆ. ಇದನ್ನೆಲ್ಲ ಒಟ್ಟುಗೂಡಿಸಿ, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಲಾಗುವುದು. ಈ ಯೋಜನೆಯು ರಾಜ್ಯದಲ್ಲಿನ ಸರಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ, ಗುಣಮಟ್ಟದ ಶಿಕ್ಷಣವನ್ನು ನೀಡುವಂತೆ ಮಾಡುತ್ತದೆ ಎಂದು ಅವರು ತಿಳಿಸಿದರು.
ಇನ್ನು ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬೆಳೆಸುವ ಸಂಬಂಧ 1 ರಿಂದ 10ನೆ ತರಗತಿಯವರೆಗೆ ಪ್ರತ್ಯೇಕವಾಗಿ ಮೌಲ್ಯಶಿಕ್ಷಣವನ್ನು ಅಳವಡಿಸಲಾಗುವುದು. ಇದಕ್ಕಾಗಿ 10 ಮೂಲಮೌಲ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ರಚಿಸಲಾಗಿದೆ. 1984 ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿಯನ್ನು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ(ಡಯಟ್) ಹಂತದಲ್ಲಿ ಈ ತಿಂಗಳ ಅಂತ್ಯದೊಳಗೆ ನೀಡಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.
ನ.1ರ ಕನ್ನಡ ರಾಜ್ಯೋತ್ಸವದಂದು ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳ ಡಿಜಿಟಲ್ ಅವತರಣಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ. ಹಾಗೆಯೇ ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳನ್ನು ಮುದ್ರಿಸಿ ಪ್ರತಿ ವಿದ್ಯಾರ್ಥಿಗೆ ಒಂದು ಚಟುವಟಿಕಾ ಪುಸ್ತಕದಂತೆ ಶಾಲೆಗಳಿಗೆ ಸರಬರಾಜು ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.







